ಬಾರಾಬಂಕಿ, ಅ.07 (DaijiworldNews/HR): ಬಸ್ ಮತ್ತು ಮರಳು ತುಂಬಿದ ಲಾರಿ ನಡುವೆ ಡಿಕ್ಕಿ ಸಂಭವಿಸಿ 15 ಮಂದಿ ಮೃತಪಟ್ಟಿದ್ದು, 27 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಬಾಬುರಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ದೆಹಲಿಯಿಂದ ಬಹ್ರೈಚ್ಗೆ 70 ಪ್ರಯಾಣಿಕರಿದ್ದ ಬಸ್ ಹೋಗುತ್ತಿದ್ದು, ಬಸ್ ಚಾಲಕ, ಅಡ್ಡಬಂದ ಬಿಡಾಡಿ ಹಸುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಇನ್ನು ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಆರು ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಜೀವ ಕಳೆದುಕೊಂಡವರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ಹಾಗೂ ಗಾಯಾಳುಗಳಿಗೆ 50,000 ಪರಿಹಾರ ಘೋಷಿಸಿದ್ದಾರೆ.