ಲಖಿಂಪುರ, ಅ.08 (DaijiworlNews/HR): ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ವಾಹನ ಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಮುಂದೆ ಹಾಜರಾಗಬೇಕೆಂದು ಹೇಳಿದ್ದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರು ಪೊಲೀಸ್ ಠಾಣೆಗೆ ತಲುಪಿಲ್ಲ ಎಂದು ಮೂಲಗಳು ತಿಳಿಸಿವೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆಶಿಶ್ ಪಾಂಡೆ ಮತ್ತು ಲವಕುಶ ಎಂಬ ಇಬ್ಬರು ಆರೋಪಿಗಳನ್ನು ಗುರುವಾರ ಬಂಧಿಸಿದ್ದು, ಆಶಿಶ್ ಮಿಶ್ರಾ ಮನೆಯ ಹೊರಗೆ ನೋಟಿಸ್ ಅಂಟಿಸಿ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತಮ್ಮ ಮುಂದೆ ಹಾಜರಾಗಬೇಕು ಎಂದು ಹೇಳಿತ್ತು.
ಇನ್ನು ಲಖಿಂಪುರ-ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಎಂಟು ಜನರು ಮೃತಪಟ್ಟಿದ್ದು, ಕೇಂದ್ರ ಗೃಹಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಬೆಂಗಾವಲು ಪಡೆಯ ಎರಡು ಎಸ್ಯುವಿಗಳು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಹರಿದಿದ್ದವು. ಈ ವೇಳೆ ನಾಲ್ವರು ರೈತರು ಬಲಿಯಾಗಿದ್ದರು. ಆಕ್ರೋಶಗೊಂಡ ರೈತರು ಎರಡೂ ಎಸ್ಯುವಿಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಈ ಎಸ್ಯುವಿಗಳಲ್ಲಿ ಇದ್ದವರಲ್ಲಿ ನಾಲ್ವರು ಮೃತಪಟ್ಟಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರವು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕಸದಸ್ಯ ತನಿಖಾ ಆಯೋಗವನ್ನು ರಚಿಸಿದೆ.