ಬೆಂಗಳೂರು, ಅ.10 (DaijiworldNews/PY): ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ (72) ಅವರು ಭಾನುವಾರ ನಿಧನರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟ ಕಾರಣ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 2 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಹೆಗಡೆ ನಗರದಲ್ಲಿರುವ ಅವರ ನಿವಾಸಕ್ಕೆ ಮೃತದೇಹವನ್ನು ಕೊಂಡೊಯ್ಯಲಾಗಿದ್ದು, ಬೆಳಗ್ಗೆ 8 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಮಧ್ಯಾಹ್ನ 1.30ರ ನಂತರ ಸತ್ಯಜಿತ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಸಯ್ಯದ್ ನಿಜಾಮುದ್ದೀನ್ ಚಿತ್ರರಂಗದಲ್ಲಿ ಸತ್ಯಜಿತ್ ಎನ್ನುವ ಹೆಸರಿನಿಂದ ಗುರುತಿಸಿಕೊಂಡಿದ್ದರು. ಇವರು 600ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಆಪ್ತಮಿತ್ರ, ಅಪ್ಪು, ಅರಸು, ಅಭಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಇವರು ಹೆಚ್ಚಾಗಿ ಪೋಷಕ ಪಾತ್ರದಲ್ಲಿ ಗಮನ ಸೆಳೆದಿದ್ದರು.