ಬೆಂಗಳೂರು, ಅ.11 (DaijiworldNews/HR): ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಭಾನುವಾರ ನಡೆದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಕನ್ನಡಕ್ಕೆ ಅಪಮಾನ ಮಾಡಿರುವ ಬಗ್ಗೆ ಎಚ್ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ" ಎಂದರು.
ಇನ್ನು "ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ? ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು" ಎಂದು ಹೇಳಿದ್ದಾರೆ.