ಬೆಂಗಳೂರು, ಅ 14 (DaijiworldNews/MS): ಕಾಂಗ್ರೆಸ್ ಪಕ್ಷವನ್ನು ನಾನು ಮಾತ್ರ ಕಟ್ಟಿಲ್ಲ. ಹಳ್ಳಿ - ಹಳ್ಳಿಯ ಲಕ್ಷಾಂತರ ಜನ, ಕಾರ್ಯಕರ್ತರು ಈ ಪಕ್ಷ ಕಟ್ಟಿದ್ದು, ಹೀಗಾಗಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದೇ ತಮ್ಮ ಗುರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, " ಯಾರು ಏನು ಬೇಕಾದರೂ ಮಾಡಿಕೊಳ್ಳಲಿ. ಆ ಬಗ್ಗೆ ತಾವು ತಲೆ ಕೆಡಿಸಿಕೊಳ್ಳುವುದಿಲ್ಲ ನಮ್ಮದೇನಿದ್ದರೂ ಸಂಪೂರ್ಣ ಬಹುಮತದೊಂದಿಗೆ ಮುಂದಿನ ಬಾರಿ ಅಧಿಕಾರಕ್ಕೆ ಬರುವುದು . ಕಾರ್ಯಕರ್ತರ ಜತೆ ನಿಂತು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ ನನ್ನ ಕರ್ತವ್ಯ. ನಾನು ಆ ಬಗ್ಗೆ ಮಾತ್ರ ಯೋಚಿಸುತ್ತೇನೆ ಎಂದು ತಿಳಿದ್ದಾರೆ.
ಸಲೀಂ ಹಾಗೂ ವಿ.ಎಸ್ ಉಗ್ರಪ್ಪ ಅವರ ಸಂಭಾಷಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಯಾರನ್ನೂ ಈ ಬಗ್ಗೆ ದೂರುವುದಿಲ್ಲ. ನನ್ನ ಬಗ್ಗೆ ಯಾರು, ಹೇಗೆ ಬೇಕೋ ಹಾಗೆ ಮಾತನಾಡಿದ್ದಾರೆ. ಅದನ್ನು ಯಾರು ಯಾವ ರೀತಿ ಬಳಸಿಕೊಳ್ಳಬೇಕೋ, ಬಳಸಿಕೊಂಡಿದ್ದಾರೆ. ನಾನು ಈ ಬಗ್ಗೆ ಬಿಜೆಪಿ ಪಕ್ಷ ಅಥವಾ ಮಾಧ್ಯಮಗಳನ್ನಾಗಲಿ ದೂಷಿಸುವುದಿಲ್ಲ. ನಾವು ಅವಕಾಶ ಕೊಟ್ಟಿದ್ದರಿಂದ ಬೇರೆಯವರು ಅದನ್ನು ಚೆನ್ನಾಗಿ ಬಳಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.