ಬೆಂಗಳೂರು, ಅ. 14 (DaijiworldNews/SM): ವಿದ್ಯುತ್ ಕೊರತೆಯ ಬಗ್ಗೆ ರಾಜ್ಯದಲ್ಲಿ ಚರ್ಚೆಯಾಗುತ್ತಿರುವ ನಡುವೆಯೂ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ಸಮಸ್ಯೆಯಾಗದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಪ್ರಸ್ತುತ ಕೋಲ್ ಇಂಡಿಯಾ ಲಿಮಿಟೆಡ್ ಮತ್ತು ಎಸ್ ಸಿ ಸಿಎಲ್ ನಿಂದ ದಿನಂಪ್ರತಿ12 ರಿಂದ 13 ರೇಕ್ ಕಲ್ಲಿದ್ದಲು ಪೂರೈಕೆ ಮಾಡಲಾಗುತ್ತಿದೆ. ಇದರಿಂದಾಗಿ ಬೇಡಿಕೆ ಪೂರೈಸಲು ಸಾಧ್ಯವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯ ವಿದ್ಯುತ್ ನಿಗಮ ಲಿಮಿಟೆಡ್ ನಿಂದ ಮೂರು ವಿದ್ಯುತ್ ಸ್ಥಾವರಗಳಾದ ರಾಯಚೂರು, ಬಳ್ಳಾರಿ ಹಾಗೂ ಯರಮರಸ್ ಉಷ್ಣ ವಿದ್ಯುತ್ ಸ್ಥಾವರಗಳು ಕಾರ್ಯನಿರ್ವಹಿಸುತ್ತಿವೆ. ಈ ಪೈಕಿ ರಾಯಚೂರು ಉಷ್ಣ ವಿದ್ಯುತ್ ಸ್ಥಾವರದಲ್ಲಿ 8 ಘಟಕಗಳಿದ್ದು, 1,720 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಶಕ್ತಿ ಹೊಂದಿದೆ. ಬಳ್ಳಾರಿ ಸ್ಥಾವರದ 3 ಘಟಕಗಳಲ್ಲಿ 1,700 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಅವಕಾಶವಿದೆ. ಇನ್ನು ಯರಮರಸ್ ಸ್ಥಾವರದ 2 ಘಟಕಗಳು 1,600 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನಾ ಶಕ್ತಿ ಹೊಂದಿವೆ ಎಂದು ಸಚಿವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸದ್ಯ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಎದುರಾಗದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.