ಬೆಂಗಳೂರು, ಅ.17 (DaijiworldNews/PY): "ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಸಿಎಂ ಬಸವರಾಜ ಬೊಮ್ಮಾಯಿ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ ಕನಸು ನನಸಾಗಬಹುದು" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, "ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ ಪೊಲೀಸ್ಗಿರಿಯ ದೌರ್ಜನ್ಯ. ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ. ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ. ಇದಕ್ಕೆಲ್ಲ ಸಿಎಂ ಬಹಿರಂಗ ಬೆಂಬಲ. ರಾಜ್ಯದಲ್ಲಿ ಸರ್ಕಾರ ಇದೆಯೇ?" ಎಂದು ಪ್ರಶ್ನಿಸಿದ್ದಾರೆ.
ಗೂಂಡಾಗಿರಿಯನ್ನು 'ಕ್ರಿಯೆಗೆ ಪ್ರತಿಕ್ರಿಯೆ' ಎಂದು ಸಮರ್ಥಿಸಿದ ಸಿಎಂ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ ಎಂದಿದ್ದಾರೆ.
"ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಅವರೇ, ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ" ಎಂದು ಹೇಳಿದ್ದಾರೆ.