ಬೆಳಗಾವಿ, ಅ.20 (DaijiworldNews/PY): "ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವ ಬಗ್ಗೆ ಕನ್ನಡಪರ ಸಂಘಟನೆಗಳ ಒತ್ತಾಯ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಶೀಘ್ರದಲ್ಲೇ ತಜ್ಞರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು" ಎಂದಿದ್ದಾರೆ.
"ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಆದರೆ, ಕನ್ನಡ ರಾಜ್ಯೋತ್ಸವದಂದು ನಡೆಯುವ ಮೆರವಣಿಗೆಗಳ ಬಗ್ಗೆ ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿಲ್ಲ" ಎಂದು ಹೇಳಿದ್ದಾರೆ.
ಉಪಚುನಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಬಿಜೆಪಿ ಅಭ್ಯರ್ಥಿಗಳು ಎರಡು ಕ್ಷೇತ್ರದ ಉಪಚುನಾವಣೆಯಲ್ಲಿ ಬಹುಮತದಿಂದ ಜಯ ಸಾಧಿಸಲಿದ್ದಾರೆ" ಎಂದಿದ್ದಾರೆ.
"ಮುಂಬೈ ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ಇಂದು ನಿರ್ಧಾರವಾಗಬೇಕು" ಎಂದು ತಿಳಿಸಿದ್ದಾರೆ.