ಬೆಂಗಳೂರು, ಅ.23 (DaijiworldNews/PY): "ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ನಲ್ಲಿ ಪೊಲೀಸರು ತಪ್ಪಿತಸ್ಥರಲ್ಲ" ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
2019ರ ಡಿಸೆಂಬರ್ 19ರಂದು ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕೋರಿ ಕೋರಿ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಎಚ್.ಎಸ್.ದೊರೆಸ್ವಾಮಿ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಗೋಲಿಬಾರ್ ಘಟನೆಯ ಸಂಬಂಧ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಶುಕ್ರವಾರ ಈ ಮಾಹಿತಿ ನೀಡಿದೆ.
ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, "ರಾಜ್ಯ ಸರ್ಕಾರ ಈ ವರದಿಯನ್ನು ಒಪ್ಪಿಕೊಂಡಿದೆ. ಪೊಲೀಸ್ ಸಿಬ್ಬಂದಿ ವಿರುದ್ಧದ ಆರೋಪಗಳನ್ನು ಸಹ ವಿಚಾರಣೆ ಮಾಡಲಾಗಿದೆ. ಗಲಭೆ ಉಂಟು ಮಾಡಿದವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದ್ದು, ಅಪರಾಧ ತನಿಖಾ ಇಲಾಖೆ ದೂರುಗಳ ತನಿಖೆ ನಡೆಸುತ್ತಿದೆ" ಎಂದು ತಿಳಿಸಿದ್ದಾರೆ.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, "ಮ್ಯಾಜಿಸ್ಟ್ರೇಟ್ ತನಿಖೆಯು ಪೊಲೀಸರ ಪರವಾಗಿ ನಡೆಸಿದಂತೆ ತೋರುತ್ತಿದೆ. ಪೊಲೀಸರ ವಿರುದ್ಧ ಹತ್ತು ದೂರುಗಳನ್ನು ಸಲ್ಲಿಸಿದ್ದರೂ, ಯಾವುದೇ ತನಿಖೆ ಮಾಡಿಲ್ಲ" ಎಂದಿದ್ದಾರೆ.
ನ್ಯಾಯಾಲಯ ನೀಡಿದ ಆದೇಶಗಳನ್ನು ಪಾಲಿಸಿರುವ ಕುರಿತು ಅನುಸರಣಾ ವರದಿ ಒಳಗೊಂಡ ಪ್ರಮಾಣ ಪತ್ರ ಸಲ್ಲಿಸುವಂತೆ ಪೀಠ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.