ನವದೆಹಲಿ, ಅ.24 (DaijiworldNews/PY): ಇಂಧನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದು, "ಪೆಟ್ರೋಲ್ ಬೆಲೆಯ ಮೇಲಿನ ತೆರಿಗೆ ವಂಚನೆ ಹೆಚ್ಚುತ್ತಿದೆ" ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಪೆಟ್ರೋಲ್ ಬೆಲೆ ಮೂಲಕ ತೆರಿಗೆ ವಂಚನೆ ಹೆಚ್ಚಾಗುತ್ತಿದೆ. ಒಂದು ವೇಳೆ ಎಲ್ಲಿಯಾದರೂ ಚುನಾವಣೆ ನಡೆದರೆ ಮಾತ್ರವೇ ಅದಕ್ಕೆ ಸ್ವಲ್ಪ ವಿರಾಮ ಸಿಗುತ್ತದೆ" ಎಂದಿದ್ದಾರೆ.
ಇನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಕೂಡಾ ಪೆಟ್ರೋಲ್, ಡೀಸೆಲ್ ದರ ಏರಿಕೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದು, "ಸಾರ್ವಜನಿಕರಿಗೆ ತೊಂದರೆ ಕೊಡುವ ವಿಚಾರದಲ್ಲಿ ಮೋದಿ ಸರ್ಕಾರ ದೊಡ್ಡ ದಾಖಲೆ ಮಾಡಿದೆ" ಎಂದು ಲೇವಡಿ ಮಾಡಿದ್ದಾರೆ.
"ಸಾರ್ವಜನಿಕರಿಗೆ ತೊಂದರೆ ಕೊಡುವ ವಿಚಾರದಲ್ಲಿ ಮೋದಿ ಸರ್ಕಾರ ದೊಡ್ಡ ದಾಖಲೆ ಮಾಡಿದೆ. ಮೋದಿ ಸರ್ಕಾರದ ಅವಧಿಯಲ್ಲಿ ಅತ್ಯಧಿಕ ನಿರುದ್ಯೋಗ ಸೃಷ್ಟಿಯಾಗಿದೆ. ಮೋದಿ ಸರ್ಕಾರದಲ್ಲಿ ಸರ್ಕಾರಿ ಆಸ್ತಿ ಮಾರಾಟ ಮಾಡಲಾಗುತ್ತಿದೆ. ಮೋದಿ ಸರ್ಕಾರದಲ್ಲಿ ಒಂದು ವರ್ಷದಲ್ಲಿ ಅತಿ ಹೆಚ್ಚು ಪೆಟ್ರೋಲ್ ದರ ಏರಿಕೆ ಆಗಿದೆ" ಎಂದಿದ್ದಾರೆ.
ಭಾನುವಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರಿಗೆ 35 ಪೈಸೆ ಏರಿಕೆ ಮಾಡಲಾಗಿದ್ದು, ಇಂಧನ ದರ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ.