ಧಾರವಾಡ, ಅ.28 (DaijiworldNews/HR): ಡಿ.ಕೆ. ಶಿವಕುಮಾರ್ ಅವರ ಆಪ್ತ, ಉದ್ಯಮಿ ಯು.ಬಿ.ಶೆಟ್ಟಿ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಯು.ಬಿ.ಶೆಟ್ಟಿ ಅವರು ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಶಿಕ್ಷಣ ಸಂಸ್ಥೆ ಹೊಂದಿದ್ದು, ಇವರ ಆದಾಯ ಮೂಲ ಕುರಿತು ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಇನ್ನು ಗೋವಾದಿಂದ ಬಂದಿರುವ ಐಟಿ ತಂಡ ಇದರಲ್ಲಿ ಪಾಲ್ಗೊಂಡಿದೆ. ಆದರೆ ಯು.ಬಿ.ಶೆಟ್ಟಿ ಈ ಸಂದರ್ಭದಲ್ಲಿ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.
ದಾಳಿ ಬಗ್ಗೆ ಕಾಂಗ್ರೆಸ್ ಮುಖಂಡ ರಾಬರ್ಟ್ ದದ್ದಾಪುರಿ ಮಾತನಾಡಿ, ಡಿ.ಕೆ.ಶಿವಕುಮಾರ್ ಅವರ ಆಪ್ತರಾಗಿರುವ ಶೆಟ್ಟಿ ಮನೆ ಮೇಲೆ ರಾಜಕೀಯ ದುರುದ್ದೇಶದಿಂದ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.