ಬೆಂಗಳೂರು, ನ.01 (DaijiworldNews/PY): "ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಒಂದು ಸುಸಜ್ಜಿತವಾದ ಶಾಲಾ ಸಂಕೀರ್ಣವನ್ನು ನಿರ್ಮಿಸಲಾಗುವುದು" ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಚಿವರು, "ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣ ಅಗತ್ಯವಿದ್ದು, ಇದಕ್ಕೆ ಪೂರಕವಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಎಲ್ಲಾ ಮೂಲಸೌಕರ್ಯ ಇರುವ ಸಂಕೀರ್ಣವನ್ನು ನಿರ್ಮಾಣ ಮಾಡಲಾಗುವುದು" ಎಂದಿದ್ದಾರೆ.
"ಮಕ್ಕಳು ಹಾಗೂ ಪೋಷಕರಲ್ಲಿ ಸರ್ಕಾರಿ ಶಾಲೆಗಳು ಹಾಗೂ ಕನ್ನಡ ಕಲಿಕೆ ಬಗ್ಗೆ ಜಾಗೃತಿ ಮೂಡಿಸುವುದು ಮುಖ್ಯ. ರಾಜ್ಯದಲ್ಲಿರುವ 22,718 ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ 14,230 ಶಾಲೆಗಳಲ್ಲಿ 40ಕ್ಕಿಂತ ಕಡಿಮೆ ಮಕ್ಕಳ ದಾಖಲಾತಿ ಇದೆ. ಇನ್ನು 22,710 ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 2,421 ಶಾಲೆಗಳಲ್ಲಿ 35ಕ್ಕಿಂತ ಕಡಿಮೆ ಮಕ್ಕಳು ದಾಖಲಾಗಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.