ಬೆಂಗಳೂರು, ನ.04 (DaijiworldNews/PY): "ಚುನಾವಣೆಯಲ್ಲಿ ಮತದಾರರು ಬಿಜೆಪಿ ಸೋಲಿಸಿದರೆ ಪೆಟ್ರೋಲ್-ಡೀಸೆಲ್ ಬೆಲೆ ಇಳಿಯುತ್ತದೆ ಎನ್ನುವ ಪಾಠವನ್ನು ಹೇಳಿಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಇದು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ದೀಪಾವಳಿ ಕೊಡುಗೆ ಅಲ್ಲ, ಇದು ದೇಶದಾದ್ಯಂತ ನಡೆದ ಉಪಚುನಾವಣೆಗಳ ಕೊಡುಗೆ" ಎಂದು ವಿಪಕ್ಷ ನಾಯ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಯುಪಿಎ ಕಾಲದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ಗೆ 125 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 65 ರೂಪಾಯಿಗಳಾಗಿತ್ತು. ಬಿಜೆಪಿ ಸರ್ಕಾರದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ಗೆ 82 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 100 ರೂಪಾಯಿಗೆ ಇಳಿಸಿದ್ದು ಮಹಾನ್ ಸಾಧನೆ" ಎಂದಿದ್ದಾರೆ.
"ಅಡುಗೆ ಅನಿಲ ಬೆಲೆ ಸಾವಿರ ರೂಪಾಯಿ ತಲುಪಿದೆ. ಆಹಾರ ಧಾನ್ಯ, ಖಾದ್ಯತೈಲದ ಬೆಲೆ ಏರುತ್ತಲೇ ಇದೆ. ಈ ಬೆಲೆಗಳು ಕೂಡಾ ಇಳಿಯಬೇಕಾದರೆ ಬಿಜೆಪಿ ಅನ್ನು ಇನ್ನಷ್ಟು ಚುನಾವಣೆಗಳಲ್ಲಿ ಮತದಾರರು ಸೋಲಿಸುತ್ತಲೇ ಇರಬೇಕು" ಎಂದು ಹೇಳಿದ್ದಾರೆ.
"ಸದ್ಯದಲ್ಲಿಯೇ ನಮ್ಮ ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಗಳಿಗೆ ಹಾಗೂ ಬೆಂಗಳೂರು ಮಹಾನಗರಪಾಲಿಕೆಗೆ ಚುನಾವಣೆಗಳು ನಡೆಯಲಿವೆ. ಪ್ರಧಾನಿ ಮೋದಿ ಅವರು ಹೇಳಿಕೊಟ್ಟಿರುವ ಪಾಠವನ್ನು ಮತದಾರರು ನೆನಪಲ್ಲಿಟ್ಟುಕೊಂಡು ಮತದಾನ ನಡೆಸಬೇಕು" ಎಂದು ವ್ಯಂಗ್ಯವಾಡಿದ್ದಾರೆ.