ಮುಂಬೈ, ನ.07 (DaijiworldNews/PY): ಮಹಾರಾಷ್ಟ್ರದ ಕಾಂದಿವಲೀ ಉಪನಗರದ 15 ಮಹಡಿಯ ವಸತಿ ಸಮುಚ್ಚಯವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಾತ್ರಿ 8.30ರ ಸುಮಾರಿಗೆ 14ನೇ ಮಹಡಿಯ ಫ್ಲ್ಯಾಟ್ನಲ್ಲಿ ಬೆಂಕಿ ಕಾಣಿಡಿಕೊಂಡಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಸೇರಿದಂತೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ನಾಲ್ಕು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.
ಅಗ್ನಿ ಅವಘಡದಲ್ಲಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೋರ್ವರನ್ನು ಆಸ್ಪತ್ರೆಗೆ ದಾಖಲಿಸುವುದಕ್ಕೂ ಮುನ್ನವೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಗ್ನಿ ಅವಘಡಕ್ಕೆ ಕಾರಣ ಏನು ಎಂದು ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದಿದ್ದಾರೆ.