ಬೆಂಗಳೂರು, ನ. 07 (DaijiworldNews/SM): ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಕೂಡಲೇ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಡಿಸೆಂಬರ್ ಮೊದಲ ವಾರದಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು 100 ಕಿಲೋಮೀಟರ್ ಪಾದಯಾತ್ರೆಯನ್ನು ಘೋಷಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ರವಿವಾರ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಇಬ್ಬರು ಕಾಂಗ್ರೆಸ್ ನಾಯಕರು, ಪಾದಯಾತ್ರೆಯ ನಿಖರವಾದ ದಿನಾಂಕ ಮತ್ತು ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು ಎಂದು ಹೇಳಿದರು.
ಪಾದಯಾತ್ರೆಯಲ್ಲಿ ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಹಾಸನ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಮತ್ತು ಇತರ ಜಿಲ್ಲೆಗಳ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಗೆ ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರವಿದೆ ಎಂದು ನೆನಪಿಸಿದ ಕಾಂಗ್ರೆಸ್ ನಾಯಕರು, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಯಾವುದೇ ಕಾನೂನು ಅಡ್ಡಿ ಇಲ್ಲ ಎಂದು ಹೇಳಿದರು. ಆದರೆ ಕೇಂದ್ರ ಸರ್ಕಾರ ಮತ್ತು ಬಸವರಾಜ ಬೊಮ್ಮಾಯಿ ಸರ್ಕಾರ ಈ ಯೋಜನೆಯನ್ನು ಮುಂದುವರಿಸುವ ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ ಎಂದರು.