ಬೆಂಗಳೂರು, ನ. 10 (DaijiworldNews/SM): ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಹಂತದಲ್ಲಿ ಮುಂದಿನ ವರ್ಷಕ್ಕೆ ಅನ್ವಯವಾಗುವಂತೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಸರಕಾರ ಮುಂದಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಜ್ಞಾನ, ವಿಜ್ಞಾನ, ಕೌಶಲ್ಯದ ಜೊತೆಗೆ ಮಾನವೀಯ ಮೌಲ್ಯಗಳು, ಸಂಸ್ಕೃತಿ ಮತ್ತು ಸಂಸ್ಕಾರವನ್ನು ನೀಡುವ ಸಮಗ್ರ ಶಿಕ್ಷಣದ ಅಗತ್ಯವಿದೆ. ಈ ನಿಟ್ಟಿನಲ್ಲಿ 'ರಾಷ್ಟ್ರೀಯ ಶಿಕ್ಷಣ ನೀತಿ-2020' ಪೂರಕವಾಗಲಿದೆ ಎನ್ನುವ ವಿಶ್ವಾಸವನ್ನು ಶಿಕ್ಷಣ ಸಚಿವರು ವ್ಯಕ್ತಪಡಿಸಿದ್ದಾರೆ. ಈ ಕಾರಣದಿಂದಾಗಿ ಮುಂದಿನ ಸಾಲಿನಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಪ್ರಯತ್ನ ನಡೆಸಲಾಗುವುದೆಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.
ದೇಶದ ಎಲ್ಲಾ ನಾಗರಿಕರಿಗೆ ಶಿಕ್ಷಣ ನೀಡಬೇಕು ಈ ನಿಟ್ಟಿನಲ್ಲಿ ಜಾತಿ ವ್ಯವಸ್ಥೆ, ತಾರತಮ್ಯ ಹೋಗಲಾಡಿಸಬೇಕು ಎಂಬುವುದು ಕನಸಾಗಿದೆ. ದಶಕಗಳಿಂದಲೂ ಇದನ್ನೇ ಪ್ರತಿಪಾದಿಸಲಾಗುತ್ತಿದೆ. ದೇಶದ ಪ್ರತಿಯೊಬ್ಬ ನಾಗರಿಕರಿಗೂ ಶಿಕ್ಷಣ, ಅಕ್ಷರ ಜ್ಞಾನ ನೀಡುವ ಪ್ರಯತ್ನಗಳು ನಡೆಯುತ್ತಿದ್ದು, 'ರಾಷ್ಟ್ರೀಯ ಶಿಕ್ಷಣ ನೀತಿ’ ಈ ನಿಟ್ಟಿನಲ್ಲಿ ಪೂರಕವಾಗಲಿದೆ ಎಂದು ಅವರು ತಿಳಿಸಿದ್ದಾರೆ.