ಮುಂಬೈ, ನ.12 (DaijiworldNews/PY): ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರ ಹೆಣ್ಣು ಮಗುವಿಗೆ ಅತ್ಯಾಚಾರ ಎಸಗುವುದಾಗಿ ಬೆದರಿಕೆ ಹಾಕಿದ್ದ ಸಾಫ್ಟ್ವೇರ್ ಇಂಜಿನಿಯರ್ ರಾಮ್ನಾಗೇಶ್ ಅಕುಬಥಿನಿ ಅವರನ್ನು ಮುಂಬೈ ನ್ಯಾಯಾಲಯ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ರಾಮ್ನಾಗೇಶ್ ಅಕುಬಥಿನಿ ಅನ್ನು ಮುಂಬೈನ ಎಸ್ಪ್ಲನೇಡ್ನಲ್ಲಿರುವ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈತನನ್ನು ನವೆಂಬರ್ 15ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಆರೋಪಿ ಶ್ರೀನಿವಾಸನ್ ಅಕುಬಥಿನಿಯನ್ನು ಬುಧವಾರ ಹೈದರಾಬಾದಿನಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದರು. ಈತ ಬಿ. ಟೆಕ್ ಪದವೀಧರನಾಗಿದ್ದು, ಫುಡ್ ಡೆಲಿವರಿ ಕಂಪೆನಿಯೊಂದರಲ್ಲಿ ಸಾಫ್ಟ್ವೇರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ.
ಐಸಿಸಿ ಟಿ20 ವಿಶ್ವಕಪ್ ಆರಂಭಿಕ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ದ ಸೋತಾಗ ಭಾರತದ ತಂಡದ ನಾಯಕನ ವೈಫಲ್ಯಕ್ಕೆ ಅನೇಕ ಅಭಿಮಾನಿಗಳು ಟೀಕಿಸಿದ್ದರು. ಈ ನಡುವೆ ಓರ್ವ ಸಾಮಾಜಿಕ ಜಾಲತಾಣದಲ್ಲಿ ವಿರಾಟ್ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ.
ಈ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ, ದೆಹಲಿ ಮಹಿಳಾ ಆಯೋಗವು ದೆಹಲಿ ಪೊಲೀಸರಿಂದ ಈ ಕುರಿತು ಪ್ರತಿಕ್ರಿಯೆ ಕೇಳಿತ್ತು. ಶೀಘ್ರವೇ ಆರೋಪಿಯನ್ನು ಬಂಧಿಸಲು ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿತ್ತು.