ತುಮಕೂರು ನ 13 (DaijiworldNews/MS): ಬಿಟ್ ಕಾಯಿನ್ ಹಗರಣವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಲಿ ಪಡೆಯಲಿದೆ. ಈ ಬಾರಿ ಕೂಡ ಬಿಜೆಪಿ ಸರ್ಕಾರದಲ್ಲಿ ಮೂರನೇ ಮುಖ್ಯಮಂತ್ರಿಯಾಗಲಿದ್ದಾರೆ. ಬೊಮ್ಮಾಯಿ ತಲೆದಂಡವಾಗಲಿದೆ ಎಂಬ ವದಂತಿಯನ್ನು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ. ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ, ಹೈಕಮಾಂಡ್ ಹಾಗೂ ಜನರ ನಿರೀಕ್ಷೆಯಂತೆ ಕೆಲಸ ಮಾಡುತ್ತಿದ್ದಾರೆ. ಇನ್ನು ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಎಂ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿದ್ದಾರೆ. ಈ ಪ್ರಕರಣ ಪ್ರಧಾನಿ ನರೇಂದ್ರ ಮೋದಿಯವರ ಗಮನಕ್ಕೂ ಬಂದಿದ್ದು, ಖಂಡಿತವಾಗಿಯೂ ಇದು ಪ್ರಮುಖವಾದ ವಿಚಾರವಾಗಿದೆ. ಯಾರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೋ ಅವರ ವಿರುದ್ಧ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ, ಬಿಜೆಪಿ ಅಧ್ಯಕ್ಷರ ಬದಲಾವಣೆಯ ಯಾವುದೇ ಪ್ರಸ್ತಾಪ ಇಲ್ಲಎಂದು ಸ್ಪಷ್ಟವಾಗಿ ಇದೇ ವೇಳೇ ತಿಳಿಸಿದರು.