ಪಂಜಾಬ್,ನ 13 (DaijiworldNews/MS): ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರು ದೆಹಲಿ ಪೊಲೀಸರಿಂದ ಬಂಧಿಸಲ್ಪಟ್ಟ 83 ಜನರಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ಶುಕ್ರವಾರ ಘೋಷಿಸಿದ್ದಾರೆ.
ಗಣರಾಜ್ಯೋತ್ಸವ ದಿನ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ರ್ಯಾಲಿಯ ಸಂದರ್ಭ ದೆಹಲಿಯ ಕೆಂಪು ಕೋಟೆಯಲ್ಲಿ ಹಿಂಸಾಚಾರ ಸಂಭವಿಸಿತ್ತು.
'ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ನೀಡುವ ನನ್ನ ಸರ್ಕಾರದ ನಿಲುವನ್ನು ಪುನರುಚ್ಚರಿಸುತ್ತಿದ್ದೇನೆ. ಜನವರಿ 26ರಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದಕ್ಕಾಗಿ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ 83 ಮಂದಿಗೆ ₹2 ಲಕ್ಷ ಪರಿಹಾರ ನೀಡಲು ನಾವು ನಿರ್ಧರಿಸಿದ್ದೇವೆ' ಎಂದು ಚರಣ್ಜಿತ್ ಸಿಂಗ್ ಚನ್ನಿ ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೂಡಲೇ, ಚರಣ್ಜಿತ್ ಸಿಂಗ್ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದು ಕೃಷಿ ಕಾನೂನುಗಳ ವಿರುದ್ಧ ಆಂದೋಲನ ಮಾಡುವ ರೈತರ ಬೆಂಬಲಕ್ಕೆ ತಮ್ಮ ಪಕ್ಷವು ದೃಢವಾಗಿ ನಿಂತಿದೆ ಎಂದು ಹೇಳಿದ್ದರು.
ಕೇಂದ್ರ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕಳೆದ ವರ್ಷ ನವೆಂಬರ್ 26ರಿಂದ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜನವರಿಯಲ್ಲಿ ಕೃಷಿ ಕಾಯ್ದೆಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಆದರೂ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತರ ಪ್ರತಿಭಟನೆ ಮುಂದುವರಿದಿದೆ. ರೈತ ಮುಖಂಡರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದಿರುವ ಹಲವು ಸುತ್ತಿನ ಮಾತುಕತೆಗಳೂ ಫಲಪ್ರದವಾಗಿಲ್ಲ.