ಬೆಂಗಳೂರು, ನ.18 (DaijiworldNews/PY): ವಿಧಾನಪರಿಷತ್ ಚುನಾವಣೆ ಹಾಗೂ ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸೇರಿದಂತೆ ನಾಲ್ವರು ಹಿರಿಯ ನಾಯಕರ ನೇತೃತ್ವದಲ್ಲಿ 3 ದಿನ ಜನಸ್ವರಾಜ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ.
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರ ನೇತೃತ್ವದಲ್ಲಿ ನಾಲ್ಕು ತಂಡಗಳು ರಚನೆಯಾಗಿದೆ. ಪ್ರತಿ ತಂಡಕ್ಕೆ 6-7 ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದ್ದು, ಪ್ರತಿ ಜಿಲ್ಲೆಯಲ್ಲಿ ಜನಸ್ವರಾಜ್ ಯಾತ್ರೆ ನಡೆಯಲಿದೆ.
ಇಂದು ಕೊಪ್ಪಳದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಳಿಲ್ ಜನಸ್ವರಾಜ್ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ ಭಾಗದಲ್ಲಿ ನಳಿನ್ ನೇತೃತ್ವದ ತಂಡ ಪ್ರಚಾರ ನಡೆಸಲಿದೆ.
ಬಿ ಎಸ್ ಯಡಿಯೂರಪ್ಪ ಅವರು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಪ್ರಚಾರ ನಡೆಸಿದರೆ, ಸಚಿವ ಕೆ ಎಸ್ ಈಶ್ವರಪ್ಪ ಅವರು ಚಿಕ್ಕಮಗಳೂರಿನಿಂದ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ.