ಬೆಂಗಳೂರು, ನ.18 (DaijiworldNews/HR): ನವೆಂಬರ್ 22ರವರೆಗೆ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸಾಂದರ್ಭಿಕ ಚಿತ್ರ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದ್ದು, ನವೆಂಬರ್ 20ರಂದು ಅಧಿಕ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.
ಇನ್ನು ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿ, ಟ್ರಫ್ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಮತ್ತು ಒಳನಾಡಿನಲ್ಲಿ ಮಳೆಯಾಗಿದ್ದು, ಒಳನಾಡಿನ ಕೆಲ ಜಿಲ್ಲೆಗಳಿಗೆ ಸೀಮಿತವಾಗಿದ್ದ 'ಯೆಲ್ಲೋ ಅಲರ್ಟ್' ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಿದ್ದು, ಅದೇ ರೀತಿ ಕರಾವಳಿ ಜಿಲ್ಲೆಗಳಿಗೆ ನೀಡಲಾಗಿದ್ದ ಭಾರಿ ಮಳೆಯ ಯೆಲ್ಲೋ ಅಲರ್ಟ್ ಅನ್ನು 'ಅತಿ ಭಾರಿ ಮಳೆಯ ಆರೆಂಜ್ ಅಲರ್ಟ್' ಆಗಿ ಪರಿವರ್ತಿಸಲಾಗಿದೆ.
ಕರಾವಳಿಯಲ್ಲಿ ಗಂಟೆಗೆ 40 ರಿಂದ 60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.