ಜಮ್ಮು,ನ.18 (DaijiworldNews/HR): ಇನ್ನೆರಡು ವರ್ಷಗಳಲ್ಲಿ ಕಣಿವೆಯಲ್ಲಿ ಭಯೋತ್ಪಾದನೆ ಅಂತ್ಯಗೊಳಿಸುವ ಸಲುವಾಗಿ ಕೇಂದ್ರ ಸರ್ಕಾರವು ಎಲ್ಲ ರೀತಿಯಿಂದಲೂ ಕಾರ್ಯನಿರ್ವಹಿಸುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನಂಟ್ ಗವರ್ನರ್ ಮನೋಜ್ ಸಿನ್ಹಾ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಸಾಕಷ್ಟು ಬದಲಾಗಿದ್ದು, ಆದರೆ ಕೆಲವು ಶಕ್ತಿಗಳು ಶಾಂತಿ ಕದಡಲು ಪ್ರಯತ್ನಿಸುತ್ತಿವೆ. ಇನ್ನು ಎರಡು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಕಾಣಸಿಗುವುದಿಲ್ಲ ಎಂದು ನಿಮಗೆ ಭರವಸೆ ನೀಡುತ್ತೇನೆ" ಎಂದರು.
ಇನ್ನು ಕಣಿವೆಯಲ್ಲಿ 38 ಪಾಕಿಸ್ತಾನಿ ಭಯೋತ್ಪಾದಕರು ಸಕ್ರಿಯವಾಗಿದ್ದು, ಅವರನ್ನು ಮಟ್ಟಹಾಕಲು ಶೀಘ್ರದಲ್ಲೇ ಸಂಘಟಿತ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು ಎಂದು ಗುಪ್ತಚರ ಇಲಾಖೆ ಮೂಲಗಳು ಇತ್ತೀಚೆಗೆ ತಿಳಿಸಿದ್ದವು.
ರಾಷ್ಟ್ರೀಯ ತನಿಖಾ ದಳವು (ಎನ್ಐಎ), ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ರಾಶಿದ್ ಮುಜಾಫ್ಫರ್ ಗನೈ ಮತ್ತು ನಾಸಿರ್ ಮಿರ್ ಎಂಬ ಇಬ್ಬರನ್ನು ಬಂಧಿಸಿತ್ತು.