ಬೆಂಗಳೂರು, ನ. 18 (DaijiworldNews/SM): ಅಕಾಲಿಕ ಮಳೆಯಿಂದಾಗಿ ರಾಜ್ಯ ತತ್ತರಿಸಿದೆ. ವಿವಿಧ ಜಿಲ್ಲೆಗಳಲ್ಲಿ ಕೃಷಿ ಹಾನಿ ಸಂಭವಿಸಿದೆ. ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಶುಕ್ರವಾರ ಸಿಎಂ ಮಾಹಿತಿಯನ್ನು ಪಡೆಯಲಿದ್ದಾರೆ.
ನಿರಂತರ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಬೆಂಗಳೂರು ನಗರದಲ್ಲೂ ಕೂಡ ನಿರಂತರ ಮಳೆಯಿಂದಾಗಿ ಜನ ಜೀವನ ತತ್ತರಿಸಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರ ಪಾಡು ಹೇಳತೀರದಂತಾಗಿದೆ.
ಕೋಲಾರ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಅವರನ್ನು ರಕ್ಷಿಸಲಾಗಿದೆ. ಮಳೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಅಲ್ಲದೆ ಆಯಾ ಜಿಲ್ಲೆಗಳ ಮಳೆ ಹಾನಿ ಬಗ್ಗೆ ಸಿಎಂ ಮಾಹಿತಿ ಪಡೆಯಲಿದ್ದಾರೆ.
ಇನ್ನು ಮಳೆ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲು ಸೂಚಿಸಲಾಗಿದೆ. ಉಳಿದ ಜಿಲ್ಲೆಗಳ ಪರಿಸ್ಥಿತಿಯ ಮೇರೆಗೆ ಜಿಲ್ಲಾಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ.