ಆಂಧ್ರಪ್ರದೇಶ, ನ.20 (DaijiworldNews/PY): ಭಾರಿ ಮಳೆಯ ಪರಿಣಾಮ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಅನಂತಪುರ ಜಿಲ್ಲೆಯ ಕದಿರಿ ಪಟ್ಟಣದಲ್ಲಿ ನಡೆದಿದೆ.
ಶನಿವಾರ ಮುಂಜಾನೆ 3 ಗಂಟೆಯ ಸುಮಾರಿಗೆ ಮೂರು ಅಂತಸ್ತಿನ ಕಟ್ಟಡ ಕುಸಿದ್ದಿದ್ದು, ಇದರ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಟ್ಟಡ ಕುಸಿದ ಸದ್ದು ಕೇಳಿ ಬಂದ ಅಕ್ಕಪಕ್ಕದ ನಿವಾಸಿಗಳು, ಅವಶೇಷಗಳಡಿ ಸಿಲುಕಿದ್ದ ಆರಕ್ಕೂ ಅಧಿಕ ಜನರನ್ನು ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಅಧಿಕಾರಿಗಳು, ರಕ್ಷಣಾ ಹಾಗೂ ಪರಿಹಾರ ತಂಡದ ಸದಸ್ಯರು, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ರಕ್ಷಿಸಿದ್ದಾರೆ.
ಶುಕ್ರವಾರ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಆಂಧ್ರಪ್ರದೇಶದ ಮೂರು ರಾಯಲಸೀಮಾ ಜಿಲ್ಲೆಗಳು ಹಾಗೂ ದಕ್ಷಿಣ ಕರಾವಳಿ ಜಿಲ್ಲೆಯಲ್ಲಿ 20 ಸೆಂ.ಮೀ.ವರೆಗೆ ಭಾರಿ ಮಳೆಯಾಗಿದ್ದು, ಶುಕ್ರವಾರ ಕನಿಷ್ಠ ಎಂಟು ಸಾವನ್ನಪ್ಪಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದಿದ್ದಾರೆ. ಅಲ್ಲದೇ, ರಾಜ್ಯಕ್ಕೆ ಎಲ್ಲಾ ಸಹಾಯದ ಭರವಸೆ ನೀಡಿದ್ದಾರೆ.
ಇಂದು ಸಿಎಂ ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.