ಬೆಂಗಳೂರು, ನ.20 (DaijiworldNews/HR): ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾಯ್ದೆಗಳನ್ನು ವಾಪಸು ಪಡೆದಂತೆ ರಾಜ್ಯ ಬಿಜೆಪಿ ಸರ್ಕಾರ ಕೂಡಾ ರೈತ ವಿರೋಧಿಯಾಗಿರುವ ಎಪಿಎಂಸಿ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ ಮತ್ತು ಭೂ ಸುಧಾರಣಾ (ತಿದ್ದುಪಡಿ) ಕಾಯ್ದೆಯನ್ನು ತಕ್ಷಣ ವಾಪಾಸು ಪಡೆಯಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ನರೇಂದ್ರ ಮೋದಿ ಅವರು ಕೊಂದ ಪಾಪವನ್ನು ತಿಂದು ಪರಿಹರಿಸಿಕೊಂಡಿದ್ದಾರೆ. ಈಗ ರಾಜ್ಯ ಬಿಜೆಪಿ ಸರ್ಕಾರದ ಸರದಿ. ಎಪಿಎಂಸಿಗಳ ನಿಯಂತ್ರಣವಿಲ್ಲದೆ ಸ್ವತಂತ್ರವಾಗಿ ವ್ಯಾಪಾರ ನಡೆಸುವ ಅವಕಾಶಕ್ಕಾಗಿ ಪ್ರಯತ್ನಿಸುತ್ತಲೇ ಬಂದಿರುವ ಖಾಸಗಿ ಕಂಪೆನಿಗಳಿಗೆ ಹೆಬ್ಬಾಗಿಲು ತೆರೆಯುವುದೇ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆಯ ದುರುದ್ದೇಶವಾಗಿದೆ. ಎಪಿಎಂಸಿಯ ಹೊಸ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ನಂತರ ರಾಜ್ಯ ಸರ್ಕಾರಕ್ಕೆ ಎಂಪಿಎಂಸಿಯಿಂದ ಹೊರಗಿರುವ ವರ್ತಕರ ಮೇಲೆ ಯಾವ ನಿಯಂತ್ರಣವೂ ಇರುವುದಿಲ್ಲ" ಎಂದರು.
ಇನ್ನು "ರೈತರಿಗೆ ನೆರವಾಗುವ ಉದ್ದೇಶ ಸರ್ಕಾರಕ್ಕಿದ್ದರೆ ಮಾರುಕಟ್ಟೆಗಳಿಲ್ಲದ ಕಡೆಗಳಲ್ಲಿ ಎಪಿಎಂಸಿಯಿಂದ ಪರವಾನಿಗೆ ಪಡೆದು ಮಾರುಕಟ್ಟೆಗಳನ್ನು ಸ್ಥಾಪಿಸಲು ಸರ್ಕಾರ ಉತ್ತೇಜನ ನೀಡಬಹುದಾಗಿದೆ. ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರ ಕೂಡಾ ತನ್ನ ತಪ್ಪನ್ನು ತಿದ್ದಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕೃಷಿ ಭೂಮಿ ಖರೀದಿಗೆ ಇದ್ದ 25ರೂ. ಲಕ್ಷ ಆದಾಯದ ಮಿತಿಯನ್ನು ರದ್ದುಗೊಳಿಸಿ, ಕೃಷಿಕರಲ್ಲದವರು ಕೂಡಾ ಕೃಷಿ ಭೂಮಿ ಖರೀದಿಸಲು ಅವಕಾಶ ನೀಡಲು, ಭೂ ಸುಧಾರಣಾ ಕಾಯ್ದೆ 1961ರ ಸೆಕ್ಟನ್ 80 ಮತ್ತು 79 ಎ ಬಿ ಸಿ ಗಳನ್ನು ರದ್ದು ಮಾಡಿರುವ ಸರ್ಕಾರ ರೈತರನ್ನು ಬೀದಿಪಾಲು ಮಾಡಲು ಹೊರಟಿದೆ ಎಂದು ಹೇಳಿದ್ದಾರೆ.