ನವದೆಹಲಿ, ನ.24 (DaijiworldNews/PY): ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡುವ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಕೃಷಿ ಕಾಯ್ದೆ ಮಸೂದೆ 2021 ಅನ್ನು ರದ್ದುಗೊಳಿಸುವ ಪ್ರಸ್ತಾಪಕ್ಕೆ ಇಂದು ಬೆಳಗ್ಗೆ ನಡೆದ ಸಭೆಯಲ್ಲಿ ಕೇಂದ್ರ ಸಂಪುಟ ಸಭೆ ಅನುಮೋದನೆ ನೀಡಿದೆ.
ಪ್ರಧಾನ ಮಂತ್ರಿ ಕಚೇರಿಯಲ್ಲಿ ನಡೆದ ಸಮಾಲೋಚನೆಯ ನಂತರ ಕೇಂದ್ರ ಕೃಷಿ ಸಚಿವಾಲಯ ಅಂತಿಮ ತೀರ್ಮಾನ ಕೈಗೊಂಡಿದೆ.
ಕೃಷಿ ಕಾಯ್ದೆ ರದ್ದು ಮಸೂದೆ 2021, ಕಳೆದ ವರ್ಷ ಜಾರಿಗೆ ತರಲಾದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಉದ್ದೇಶವನ್ನು ಹೊಂದಿದೆ. ರೈತರ ಬೆಲೆ ಭರವಸೆ ಹಾಗೂ ಕೃಷಿ ಸೇವೆಗಳ ಕಾಯ್ದೆ-2020, ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ-2020 ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ-2020 ರದ್ದಾಗಲಿದೆ.
ನವೆಂಬರ್ 19ರಂದು ಬೆಳಗ್ಗೆ 9 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, "ರೈತರು ತಮ್ಮ ಪ್ರತಿಭಟನೆಯನ್ನು ವಾಪಾಸು ಪಡೆದು ತಮ್ಮ ಹೊಲಗಳಿಗೆ ಹಿಂತಿರುಗಿ ಕೃಷಿ ಚಟುವಟಿಕೆಯಲ್ಲಿ ತೊಡಗುವಂತೆ ಮನವಿ ಮಾಡಿದ್ದರು.
"ಕೃಷಿ ಕಾನೂನುಗಳ ಬಗ್ಗೆ ರೈತರ ಒಂದು ವರ್ಗವನ್ನು ಮನವರಿಕೆ ಮಾಡಲು ಸರ್ಕಾರ ವಿಫಲವಾಗಿದೆ. ನಿಜವಾದ ಹಾಗೂ ಶುದ್ಧ ಹೃದಯದಿಂದ ನಾನು ಭಾರತಕ್ಕೆ ಕ್ಷಮೆಯಾಚಿಸುತ್ತೇನೆ. ರೈತರಿಗೆ ಕೃಷಿ ಕಾನೂನುಗಳ ಬಗ್ಗೆ ಮನವರಿಕೆ ಮಾಡಲು ನಮಗೆ ಸಾಧ್ಯವಾಗಲಿಲ್ಲ. ಹಾಗಾಗಿ ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ. ಈ ತಿಂಗಳು ಪ್ರಾರಂಭವಾಗುವ ಸಂಸತ್ತಿನ ಅಧಿವೇಶನದಲ್ಲಿ ನಾವು ಎಲ್ಲಾ ವಿಧಿವಿಧಾನಗಳನ್ನು ಪೂರ್ಣಗೊಳಿಸುತ್ತೇವೆ" ಹೇಳಿದ್ದರು.
ಕೇಂದ್ರ ಸರ್ಕಾರ ಒಂದು ವರ್ಷದ ಹಿಂದೆ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಿ ಅಂಗೀಕಾರ ಪಡೆದಿತ್ತು.