ಶಿಡ್ಲಘಟ್ಟ, ನ.26 (DaijiworldNews/PY): "ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದ ನಡೆದಿದೆ. ಪ್ರತಿ ಬಾರಿ ಚುನಾವಣೆ ಬಂದಾಗಲೂ ಕಾಂಗ್ರೆಸ್ ನಾಯಕರಿಗೆ ಜೆಡಿಎಸ್ ಜ್ವರ ಬರುತ್ತದೆ" ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಶಿಡ್ಲಘಟ್ಟದಲ್ಲಿ ಮಾತನಾಡಿದ ಅವರು, "ಯಾವುದೇ ಚುನಾವಣೆ ಬಂದರೂ ಕೈ ನಾಯಕರಿಗೆ ತಕ್ಷಣ ನೆನಪಾಗುವುದು ಜೆಡಿಎಸ್ ಪಕ್ಷ ಮಾತ್ರ. ಆ ಪಕ್ಷದ ನಾಯಕರು, ಜೆಡಿಎಸ್ ಹಾಗೂ ಬಿಜೆಪಿ ಒಪ್ಪಂದ ಮಾಡಿಕೊಂಡಿವೆ ಎನ್ನುತ್ತಾರೆ. ಚುನಾವಣೆ ಮುಗಿದ ಬಳಿಕ ಮರೆತು ಹೋಗುತ್ತಾರೆ. ಪದೇಪದೇ ಏಕೆ ಅವರು ಈ ರೀತಿಯ ಅಪಪ್ರಚಾರ ಮಾಡುತ್ತಾರೆ ಎನ್ನುವುದು ನನಗೆ ತಿಳಿಯುತ್ತಿಲ್ಲ" ಎಂದಿದ್ದಾರೆ.
"ಚುನಾವಣೆಯಲ್ಲಿ ನಮ್ಮನ್ನು ಸೋಲಿಸಬೇಕು ಎಂದು ಬಿಜೆಪಿ ನಾಯಕರು ಕೂಡಾ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್ ಕೂಡಾ ಅದೇ ರೀತಿ ಮಾಡುತ್ತಿದೆ. ಹೀಗಿದ್ದರೂ ಕೂಡಾ ಕಾಂಗ್ರೆಸ್ ನಾಯಕರು ವಿನಾಕಾರಣ ನಮ್ಮ ಕುರಿತು ಅಪಪ್ರಚಾರ ಮಾಡುತ್ತಿದ್ದಾರೆ" ಎಂದು ತಿಳಿಸಿದ್ದಾರೆ.
"ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದವರು ಹಾಸನದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದರು. ಈಗ ಅವರ ಮಗನಿಗೆ ಕೊಡಗು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡಿದೆ. ಈಗ ಸಚಿವರಾಗಿರುವವರ ಆಪ್ತ ಸಹಾಯಕರಾಗಿದ್ದವರು ಈಗ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಹೊಂದಾಣಿಕೆಯನ್ನು ಇದು ತಿಳಿಸುತ್ತದೆ" ಎಂದಿದ್ದಾರೆ.