ಬೆಂಗಳೂರು, ನ.26 (DaijiworldNews/HR): ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ರಾಜ್ಯಪಾಲರಿಗೆ ಕಾಂಗ್ರೆಸ್ ಪಕ್ಷವು ಮನವಿ ಸಲ್ಲಿಸಿದೆ.
ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿ ಸಂವಿಧಾನದ 356ನೇ ಪರಿಚ್ಛೇದದಡಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಮನವಿ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, "ರಾಜ್ಯ ಸರ್ಕಾರದ ಕಮಿಷನ್ ದಂಧೆ ಹಾಗೂ ಅಕ್ರಮ ಹಣದ ವರ್ಗಾವಣೆ ಬಗ್ಗೆ ಗುತ್ತಿದಾರರ ಸಂಘ ಪ್ರಧಾನಿಗಳಿಗೆ ಬರೆದ ಪತ್ರದ ಬಗ್ಗೆ ಪತ್ರಿಕೆಗಳು ವರದಿ ಮಾಡಿವೆ. ನಮ್ಮ ಸರ್ಕಾರವನ್ನು 10 ಪರ್ಸೆಂಟ್ ಸರ್ಕಾರ ಎಂದು ಕರೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇದಕ್ಕೇನು ಹೇತ್ತಾರೆ?" ಎಂದು ಪ್ರಶ್ನಿಸಿದ್ದಾರೆ.
ಇನ್ನು"ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದ್ದು, ಸಂವಿಧಾನಾತ್ಮಕವಾಗಿ ಸರ್ಕಾರ ನಡೆಯುತ್ತಿಲ್ಲ. ಸರ್ಕಾರ ವಜಾ ಮಾಡಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬೇಕು. ಇಂಥ ಭ್ರಷ್ಟ ಸರ್ಕಾರವನ್ನು ನಾವು ಎಂದೂ ಕಂಡಿಲ್ಲ" ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.