ಬೆಂಗಳೂರು, ನ.27 (DaijiworldNews/PY): ಹಲವು ದೇಶಗಳಲ್ಲಿ ರೂಪಾಂತರಿ ಕೊರೊನಾ ವೈರಸ್ ಕಾಣಿಸಿಕೊಂಡು ಹಬ್ಬುತ್ತಿರುವ ಹಿನ್ನೆಲೆ ಹಾಗೂ ಅನೇಕ ಕಡೆಗಳಲ್ಲಿ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ವಕ್ಕರಿಸಿರುವ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳು ಹಾಗೂ ತಜ್ಞರ ಸಭೆ ಕರೆದಿದ್ದಾರೆ.
ಬೆಂಗಳೂರಿನ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಂಜೆ ಸಭೆ ಕರೆದಿದ್ದಾರೆ. ಕೊರೊನಾ ತಾಂತ್ರಿಕಾ ಸಲಹಾ ಸಮಿತಿಯ ಸದಸ್ಯರು ಸೇರಿದಂತೆ ಬಿಬಿಎಂಪಿಯ ಮುಖ್ಯ ಆಯುಕ್ತರು, ಕಳೆದೊಂದು ವಾರದಿಂದ ಕೊರೊನಾ ಕಾಣಿಸಿಕೊಂಡಿರುವ ಜಿಲ್ಲೆಗಳು ಸೇರಿದಂತೆ ರಾಜ್ಯದ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ವೈದ್ಯಕೀಯ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಯ ಆಯುಕ್ತರು ಹಾಗೂ ಅಧಿಕಾರಿಗಳು, ಆರೋಗ್ಯ ಇಲಾಖೆ ಆಯುಕ್ತರು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
"ಕೊರೊನಾ ಮೂರನೇ ಅಲೆ ಉಲ್ಬಣವಾಗದಂತೆ ಕ್ರಮ ಕೈಗೊಳ್ಳಲು ಇಂದಿನ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿ ಮಾರ್ಗಸೂಚಿಗಳನ್ನು ಹೊರಡಿಸುವ ಸಾಧ್ಯತೆ ಇದೆ. ಏನೇನು ಕ್ರಮ ತೆಗೆದುಕೊಳ್ಳಬೇಕು ಎನ್ನುವ ಬಗ್ಗೆ ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಡು ಜನತೆಗೆ ತಿಳಿಸುತ್ತೇನೆ" ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.