ಮೈಸೂರು, ನ. 27 (DaijiworldNews/HR): ಮಾಜಿ ಸಚಿವ ಎ.ಮಂಜು ಕಾಂಗ್ರೆಸ್ ಸೇರಲ್ಲ. ಅವರು ಕಾಂಗ್ರೆಸ್ಗೆ ಬರುವುದಾಗಿಯೂ ಕೇಳಿಲ್ಲ. ಬಂದರೂ ನಾವು ಸೇರಿಸಿಕೊಳ್ಳುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದ ಅವಧಿಯ ಟೆಂಡರ್ ಗಳ ಬಗ್ಗೆಯೂ ತನಿಖೆ ನಡೆಸುವ ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, "ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ. ಅವರು ಯಾವುದೇ ಪಕ್ಷದವರಾಗಲಿ" ಎಂದರು.
ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಹೊಂದಾಣಿಕೆ ಇಲ್ಲ. ನಾವು ಯಾವ ಕ್ಷೇತ್ರದಲ್ಲೂ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ. ನಮ್ಮ ಬೆಂಬಲಿತರಿಗೆ ಪಕ್ಷದ ಅಭ್ಯರ್ಥಿಗೆ ಸಿಂಗಲ್ ವೋಟ್ ಹಾಕಲು ಸೂಚನೆ ಕೊಟ್ಟಿದ್ದೇನೆ" ಎಂದಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ವಿಚಾರವಾಗಿ ಮಾತನಾಡಿದ ಅವರು, "ಪ್ರಧಾನಿ ಮೋದಿ ಪ್ರಾಮಾಣಿಕರಾಗಿದ್ದರೆ ಸರ್ಕಾರ ವಜಾ ಮಾಡಲಿ. ಗುತ್ತಿಗೆದಾರರ ಸಂಘದವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಆದರೆ ಈವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಮುಖ್ಯ ಕಾರ್ಯದರ್ಶಿ ತನಿಖೆಗೆ ಆದೇಶ ಮಾಡಿದ್ದಾರೆ. ಆದರೆ ಯಾವ ಇಲಾಖೆ ವಿರುದ್ದ ಭ್ರಷ್ಟಾಚಾರದ ಆರೋಪ ಇದೆಯೋ ಅದೇ ಇಲಾಖೆಯ ಅಧಿಕಾರಿಗಳನ್ನು ತನಿಖೆಗೆ ನೇಮಿಸಿದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.