ಬೆಂಗಳೂರು, ನ. 27 (DaijiworldNews/HR): ದಕ್ಷಿಣ ಆಫ್ರಿಕಾ, ಬೋಟ್ಸ್ವಾನಾ, ಹಾಂಕಾಂಗ್, ಇಸ್ರೇಲ್, ಬೆಲ್ಜಿಯಂ, ಡೆನ್ಮಾರ್ಕ್ ಮುಂತಾದ ಹಲವು ದೇಶಗಳಲ್ಲಿ ಒಮಿಕ್ರೋನ್ ಎಂಬ ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ವಿಶೇಷ ಪರಿಶೀಲನಾ ಸಭೆ ನಡೆಸಿ ಹಲವು ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಂದು ನಡೆದ ವಿಡಿಯೋ ಕಾನ್ಫರೆನ್ಸ್ನಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಚಾಮರಾಜನಗರ, ಧಾರವಾಡ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರು ಮತ್ತು ಆಡಳಿತಾಧಿಕಾರಿಗಳು ಪಾಲ್ಗೊಂಡಿದ್ದರು.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರೋಗ್ಯ ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಆಯುಕ್ತ ರಂದೀಪ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ನಂತರ ಸಪ್ನ ಬುಕ್ ಹೌಸ್ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ 66 ಕನ್ನಡ ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ಕನ್ನಡ ಲೇಖಕಿ ಕಮಲಾ ಹಂಪನಾ, ಎಚ್.ಎಸ್.ವೆಂಕಟೇಶಮೂರ್ತಿ, ದೊಡ್ಡರಂಗೇಗೌಡ ಹಾಗೂ ಸಪ್ನ ಬುಕ್ ಹೌಸ್ ಮುಖ್ಯಸ್ಥ ನಿತಿನ್ ಶಾ, ಪತ್ರಕರ್ತ ರವಿ ಹೆಗಡೆ ಉಪಸ್ಥಿತರಿದ್ದರು.