ಹಾವೇರಿ, ನ. 28 (DaijiworldNews/HR): ಕರ್ನಾಟಕದಲ್ಲಿ ಶೇ 40ರಷ್ಟು ಕಮಿಷನ್ ದಂಧೆ ನಡೆಯುತ್ತಿದೆ ಎಂದು ಗುತ್ತಿಗೆದಾರರು ಪ್ರಧಾನಿಗೆ ಪತ್ರ ಬರೆದಿರುವ ಉದಾಹರಣೆ ಇತಿಹಾಸದಲ್ಲಿ ಇದೇ ಮೊದಲು. ಈ ಬಗ್ಗೆ ಪ್ರಧಾನಿ ಇನ್ನೂ ಕೂಡ ಏಕೆ ಕ್ರಮ ಕೈಗೊಂಡಿಲ್ಲ" ಎಂದು ವಿಧಾನಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹಮದ್ ಪ್ರಶ್ನಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಕಮಿಷನ್ ದಂಧೆ ಇಷ್ಟು ವ್ಯಾಪಕವಾಗಿ ನಡೆಯುತ್ತಿರುವುದು ರಾಜ್ಯ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿಯಾಗಿದ್ದು, ಪತ್ರ ಬಂದ ಕೂಡಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಿತ್ತು" ಎಂದರು.
ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತನಿಖೆಗೆ ಆದೇಶ ನೀಡಿದ್ದಾರೆ ಎಂಬುದು ಗೊತ್ತಾಗಿದೆ. ಕಾಂಗ್ರೆಸ್ನವರು ಕೂಡಾ ಕಮಿಷನ್ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳನ್ನು ಮಾಡಲಾಗುತ್ತಿದೆ. ಅಂತಹ ಇದ್ದರೆ ದಾಖಲೆ ಬಿಡುಗಡೆ ಮಾಡಲಿ. ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿ" ಎಂದು ಹೇಳಿದ್ದಾರೆ.