ಬೆಂಗಳೂರು, ನ.28 (DaijiworldNews/PY): "ಕರ್ನಾಟಕದಲ್ಲಿ ಓಮ್ರಿಕಾನ್ ರೂಪಾಂತರಿ ಪತ್ತೆಯಾಗಿಲ್ಲ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಈ ಹಿನ್ನೆಲೆ ಆಯಾ ಜಿಲ್ಲೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ" ಎಂದಿದ್ದಾರೆ.
ಧಾರವಾಡದ ಎಸ್ಡಿಎಂ ವೈದ್ಯಕೀಯ ಕಾಲೇಜಿನಲ್ಲಿನ ಕೊರೊನಾ ಸ್ಪೋಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಸದ್ಯ ಆಸ್ಪತ್ರೆಯ ಒಪಿಡಿಯನ್ನು ಬಂದ್ ಮಾಡಲಾಗಿದ್ದು, ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ" ಎಂದು ತಿಳಿಸಿದ್ದಾರೆ.
"ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ನೆಗೆಟಿವ್ ವರದಿ ಇರುವವರಿಗೆ ಮಾತ್ರವೇ ಅವಕಾಶ ನೀಡಲಾಗುತ್ತದೆ. ಇಲ್ಲವಾದಲ್ಲಿ ವೈದ್ಯಕೀಯ ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತದೆ" ಎಂದಿದ್ದಾರೆ.
"ರಾಜ್ಯದ ಗಡಿ ಭಾಗಗಳಲ್ಲಿ ಸಹ ಸೂಕ್ತವಾದ ಕ್ರಮ ಕೈಗೊಳ್ಳಲಾಗಿದೆ. ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುವುದು. ಇಲ್ಲವೇ, ಬೂಸ್ಟರ್ ಡೋಸ್ ನೀಡುವುದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ಅನುಮತಿ ಸಿಕ್ಕ ನಂತರ ಚಾಲನೆ ನೀಡಲಾಗುತ್ತದೆ" ಎಂದು ಹೇಳಿದ್ದಾರೆ.