ಬೆಂಗಳೂರು, ನ 29 (DaijiworldNews/MS): ಕೊವೀಡ್ -19 ಹೊಸ ರೂಪಾಂತರ ತಳಿ ಓಮಿಕ್ರಾನ್ ಕಾರಣದಿಂದ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನ ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿರುವ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ರಾಜ್ಯದಲ್ಲಿ ಶಾಲಾ -ಕಾಲೇಜು ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿಲ್ಲ. ಅದರೂ ಪೋಷಕರು ಈ ಬಗ್ಗೆ ಆತಂಕ ಪಡಬೇಕಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು " ಶಾಲಾ ಕಾಲೇಜು ಮುಚ್ಚುವ ನಿರ್ಧಾರ ಸದ್ಯ ಶಿಕ್ಷಣ ಇಲಾಖೆಯ ಮುಂದಿಲ್ಲ. ಕೊರೊನಾ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯೂ ಆರೋಗ್ಯ ಇಲಾಖೆಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ ಕೊರೊನಾ ಹೆಚ್ಚಾದರೆ ಸರ್ಕಾರದ ಸಲಹೆ ಪಡೆದು ನಿರ್ಧಾರ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಸಧ್ಯ ಶಾಲೆ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಗಂಭೀರವಾಗಿ ಹರಡಿಲ್ಲ. ಯಾವುದೇ ಕಾರಣಕ್ಕೂ ಪೋಷಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಇನ್ನೊಂದೆಡೆ ಕೋವಿಡ್ ನ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣು 12 ದೇಶಗಳಲ್ಲಿ ಪತ್ತೆಯಾಗಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ವಿಮಾನ ನಿಲ್ದಾಣ ಸೇರಿದಂತೆ ವಿವಿಧೆಡೆ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಕಳೆದ 12-13 ದಿನಗಳಲ್ಲಿ ನಿರ್ದಿಷ್ಟ ದೇಶಗಳಿಂದ ಬಂದವರ ಮೇಲೆ ನಿಗಾ ಇರಿಸಿ, ಅವರ ಸಂಪರ್ಕಿತರ ಪತ್ತೆ ಹಚ್ಚುವ ಪ್ರಯತ್ನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ