ಬೆಂಗಳೂರು, ನ. 30 (DaijiworldNews/HR): ವಿದೇಶಗಳಿಂದ ಕರ್ನಾಟಕಕ್ಕೆ ಪ್ರತಿ ದಿನ ಸುಮಾರು 2,500 ಪ್ರಯಾಣಿಕರು ಬರುತ್ತಿದ್ದು, ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ರೂಪಾಂತರಿ ಕೊರೊನಾ ಕಂಡುಬಂದಿರುವ ದೇಶಗಳಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗುತ್ತಿದ್ದು, ಯಾವುದೇ ದೇಶಗಳಿಂದ ಬಂದ ಪ್ರಯಾಣಿಕರಿಗೂ ಪರೀಕ್ಷೆ ನಡೆಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ" ಎಂದರು.
ಇನ್ನು "ಪ್ರತಿ ದಿನ ಸುಮಾರು 2,500 ಪ್ರಯಾಣಿಕರು ವಿದೇಶಗಳಿಂದ ರಾಜ್ಯಕ್ಕೆ ಬರುತ್ತಿದ್ದು, ನೆಗೆಟಿವ್ ಇದ್ದವರಿಗೆ ಏಳು ದಿನಗಳ ಕಾಲ ಮನೆ ಕ್ವಾರಂಟೈನ್ ಮಾಡಲಾಗುತ್ತದೆ. ರೋಗ ಲಕ್ಷಣವಿದ್ದರೂ, ನೆಗೆಟಿವ್ ಆದವರಿಗೆ 5ನೇ ದಿನ ಮತ್ತೆ ಮನೆಯಲ್ಲೇ ಪರೀಕ್ಷೆ ಮಾಡಲಾಗುತ್ತದೆ" ಎಂದಿದ್ದಾರೆ.
ಜಗತ್ತಿನ 12 ದೇಶಗಳಲ್ಲಿ ಕೋವಿಡ್ ನ ಹೊಸ ಓಮಿಕ್ರಾನ್ ವೈರಾಣು ಪತ್ತೆಯಾಗಿದ್ದು, ರಾಜ್ಯದಲ್ಲೂ ಇದು ಬರಬಹುದು ಎಂಬ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ" ಎಂದು ತಿಳಿಸಿದ್ದಾರೆ.