ಮೈಸೂರು, ಡಿ.02 (DaijiworldNews/PY): ಪಿರಿಯಾಪಟ್ಟಣದ ರಾಣಿಗೇಟ್ ಹಾಡಿಯ ಆದಿವಾಸಿ ಸಮುದಾಯಕ್ಕೆ ಸೇರಿದ ಬಸವ ಎನ್ನುವವರು ಬಹಿರ್ದೆಸೆಗೆ ಹೋಗಿದ್ದ ವೇಳೆ ಅರಣ್ಯ ಇಲಾಖೆಯ ವಾಚರ್ ಸುಬ್ರಹ್ಮಣ್ಯ ಎಂಬುವವರು ಗುಂಡು ಹಾರಿಸಿದ್ದು, ಗಾಯಗೊಂಡ ಬಸವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡಿರುವ ಬಸವ ಅವರ ಮೇಲೆಯೇ ಪೊಲೀಸರು ಪ್ರಕರಣ ದಾಖಲಿಸಿದ್ದು, ಪ್ರತಿದೂರನ್ನು ಸ್ವೀಕರಿಸುತ್ತಿಲ್ಲ ಎಂದು ನಟ ಚೇತನ್ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಆದಿವಾಸಿಗಳ ಮೇಲಿನ ದೌರ್ಜನ್ಯ ನಿಲ್ಲಬೇಕು. ಅವರಿಗೆ ನ್ಯಾಯ ಸಿಗಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು" ಎಂದು ತಿಳಿಸಿದ್ದಾರೆ.
"ಬಸವ ಎನ್ನುವವರು ಇತರ ಇಬ್ಬರೊಂದಿಗೆ ಸೇರಿಕೊಂಡು ಗಂಧದ ಮರ ಕಡಿದು, ಸಾಗಾಟ ಮಾಡುತ್ತಿದ್ದ ಸಂದರ್ಭ ಅರಣ್ಯ ಇಲಾಖೆಯ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದಾರೆ" ಎಂದು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದ ಮುಖ್ಯ ಸಂರಕ್ಷಣಾಧಿಕಾರಿ ಮಹೇಶ್ ಕುಮಾರ್ ಹೇಳಿದ್ದಾರೆ.
ಘಟನೆಯಲ್ಲಿ ಅರಣ್ಯ ಇಲಾಖೆಯ ಮೂವರು ಸಿಬ್ಬಂದಿಗಳು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಪಿಗಳಿಂದ ಗಂಧದ ಮರಗಳನ್ನು ವಶಪಡಿಕೊಂಡಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ.