ಬೆಂಗಳೂರು, ಡಿ.02 (DaijiworldNews/SM): ದೇಶದಲ್ಲಿಯೇ ಮೊದಲು ಎಂಬಂತೆ ಕರ್ನಾಟಕದಲ್ಲಿ ಎರಡು ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರದಂದು ಮಹತ್ವದ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹೊಸ ತಳಿಯ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ತಜ್ಞರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಅಲ್ಲದೆ, ಕೇಂದ್ರ ಸರಕಾರದ ಮಾರ್ಗಸೂಚಿಗಳನ್ನು ಪಡೆದುಕೊಂಡು ಮುಂದಿನ ನಿರ್ಧಾರ ತಿಳಿಸಲಾಗುವುದೆಂದು ಅವರು ತಿಳಿಸಿದ್ದಾರೆ.
ಇನ್ನು ಈಗಾಗಲೇ ಕೇಂದ್ರ ಆರೋಗ್ಯ ಸಚಿವರೊಂದಿಗೂ ಕೂಡ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಪತ್ತೆಯಾಗಿರುವ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡುವಂತೆ ಅವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.