ಬೆಂಗಳೂರು, ಡಿ 03 (DaijiworldNews/MS): ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (84) ಅವರ ಮಿದುಳು ನಿಷ್ಕ್ರಿಯಗೊಂಡಿದ್ದು, ಕೋಮಾ ಹಂತ ತಲುಪಿದ್ದಾರೆ ಎಂದು ತಿಳಿದುಬಂದಿದೆ.
ಹೊಸಕೆರೆಹಳ್ಳಿ ಬಳಿ 4 ದಿನಗಳ ಹಿಂದೆ ಕಾರಲ್ಲಿ ಹೋಗಿದ್ದ ವೇಳೆ ರಸ್ತೆ ಅಪಘಾತ ನಡೆದಿತ್ತು. ಈ ವೇಳೆ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದರು. ಆದರೆ ಮತ್ತೆ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನಲೆಯಲ್ಲಿ ಬ್ಯಾಂಕ್ ಕಾಲೋನಿಯಲ್ಲಿ ಇರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಕನ್ನಡ ಚಿತ್ರರಂಗಕ್ಕೆ ಶಿವರಾಂ ಅವರು ನೀಡಿದ ಕೊಡುಗೆ ಅಪಾರ. ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿಯೂ ಅವರು ಕೆಲಸ ಮಾಡಿದ್ದಾರೆ. ಹಲವಾರು ರೀತಿಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅವರು ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲಿ ಅಭಿನಯಿಸಿದ್ದಾರೆ. 6 ದಶಕಗಳಿಗೂ ಹೆಚ್ಚು ಕಾಲ ಅವರಿಗೆ ಬಣ್ಣದ ಲೋಕದಲ್ಲಿ ಅನುಭವವಿದೆ.