ಚಿತ್ರದುರ್ಗ, ಡಿ.05 (DaijiworldNews/PY): "ಕಾಂಗ್ರೆಸ್ ನಾಯಕರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದರೂ, ನೊಣಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ" ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಣ್ಣಾಮುಚ್ಚಾಲೆ, "ಹಾವು-ಏಣಿ, ಜಂಗಿಕುಸ್ತಿ ಪಂದ್ಯ, ಬಯಲಾಟ ಕಾಂಗ್ರೆಸ್ನಲ್ಲಿ ಶುರುವಾಗಿದೆ. ದೇಶದಲ್ಲಿ ವಿರೋಧ ಪಕ್ಷದ ಸ್ಥಾನ ಕಳೆದುಕೊಳ್ಳುವ ಭೀತಿ ಆ ಪಕ್ಷದ ನಾಯಕರನ್ನು ಕಾಡುತ್ತಿದೆ" ಎಂದು ಟೀಕಿಸಿದ್ದಾರೆ.
"ದೇಶದಲ್ಲಿ ಬಿಜೆಪಿ ಸದೃಢವಾಗಿದ್ದರೂ ಸಹ ಕೈ ನಾಯರು ಸುಮ್ಮನೆ ಆರೋಪ ಮಾಡುತ್ತಿದ್ಧಾರೆ. ಅವರು ಅಸ್ತಿತ್ವ ಉಳಿಸಿಕೊಳ್ಳುವ ನಿಟ್ಟಿಲ್ಲಿ ಸೆಣಸಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟು ಇಲ್ಲ" ಎಂದು ಆರೋಪಿಸಿದ್ದಾರೆ.
"ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊರೊನಾ ಸಮಯದಲ್ಲಿ ಉತ್ತಮ ಕೆಲಸ ಮಾಡಿದೆ. ಈಗಾಗಲೇ ಕಾಂಗ್ರೆಸ್ ಆರೋಪಗಳಿಗೆ ಉತ್ತರ ನೀಡಿದ್ದೇವೆ. ಈ ಬಗ್ಗೆ ಮತ್ತೆ ಮಾತನಾಡುವ ಅವಶ್ಯಕತೆ ಇಲ್ಲ" ಎಂದಿದ್ದಾರೆ.
ಓಮ್ರಿಕಾನ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಜ್ಞರೊಂದಿಗೆ ಸಭೆ ನಡೆಸಿದ್ದಾರೆ. ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಅವರು ಬೂಸ್ಟರ್ ಡೋಸ್ ಬಗ್ಗೆಯೂ ಚರ್ಚೆ ನಡೆಸಿದ್ದಾರೆ" ಎಂದು ಹೇಳಿದ್ದಾರೆ.
ಸಚಿವ ಸಂಪುಟ ಬದಲಾವಣೆ ಬಗ್ಗೆ ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ, ಅದು ಅವರ ವೈಯುಕ್ತಿಕ ಹೇಳಿಕೆಯಾಗಿದೆ" ಎಂದಿದ್ದಾರೆ.
"ವಿಧಾನಪರಿಷತ್ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ 15ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸುವುದು ಖಚಿತ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.