ನವದೆಹಲಿ, ಡಿ.10 (DaijiworldNews/HR): ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಮೃತಪಟ್ಟಿರುವುದು ಜನರ ಮನಸ್ಸಿನಲ್ಲಿ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, "ಚೀನಾ ಮತ್ತು ಪಾಕಿಸ್ತಾನ ವಿರುದ್ಧ ಇತ್ತೀಚಿನ ದಿನಗಳಲ್ಲಿ ದೇಶದ ಸೇನಾ ಪ್ರತಿರೋಧವನ್ನು ರೂಪಿಸುವಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್ ಪ್ರಮುಖ ಪಾತ್ರ ವಹಿಸಿದ್ದು, ಹೀಗಾಗಿ ಅದು ಜನರ ಮನಸ್ಸಿನಲ್ಲಿ ಅನುಮಾನಗಳನ್ನು ಮೂಡಿಸುತ್ತವೆ" ಎಂದರು.
ಇನ್ನು ಜನರಲ್ ರಾವತ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅತ್ಯಾಧುನಿಕ ಯಂತ್ರವಾಗಿದ್ದು, ಅದಕ್ಕೆ ಎರಡು ಎಂಜಿನ್ಗಳು ಕೂಡ ಇದ್ದವು ಎನ್ನಲಾಗಿದೆ.
ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡ ಹೆಲಿಕಾಪ್ಟರ್ ದುರಂತದಲ್ಲಿ ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಸೇರಿ 13 ಮಂದಿ ಮೃತಪಟ್ಟಿದ್ದಾರೆ.