ಹುಬ್ಬಳ್ಳಿ, ಡಿ.19 (DaijiworldNews/HR): ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿತ್ತು. ಆದರೆ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಗೋಸಂತತಿ ಕಡಿಮೆಯಾಗುತ್ತಲೇ ಇದ್ದು. ಗೋವುಗಳ ಬಗ್ಗೆ ಎಳ್ಳಷ್ಟೂ ಕಾಳಜಿ ಇಲ್ಲದೆ ಕಾಂಗ್ರೆಸ್ ಸರ್ಕಾರ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿ ಮಾಡಿತ್ತು ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಅತಿಹೆಚ್ಚು ಕಸಾಯಿಖಾನೆಗಳು ಕಾರ್ಯನಿರ್ವಹಿಸುತ್ತಿದ್ದು, ಈಗ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಜಾರಿಯಾಗಿರುವ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಲು ಒತ್ತಾಯ ಮಾಡುತ್ತಿದೆ. ಯಾವ ನೈತಿಕತೆ ಇಟ್ಟುಕೊಂಡು ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಲು ಆಗ್ರಹಿಸುತ್ತಿದೆ" ಎಂದರು.
ಇನ್ನು ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿ ಮಾಡುವ ಮೊದಲು ಬೇರೆ ಬೇರೆ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ಅಧ್ಯಯನ ನಡೆಸಿ ಕರ್ನಾಟಕದಲ್ಲಿ ಕಾಯ್ದೆಯ ಅನುಷ್ಠಾನ ಮಾಡಲಾಗಿದ್ದು, ಗೋವುಗಳ ಮಾರಣಹೋಮ ನಡೆಯುವುದಕ್ಕೆ ಈಗ ಕಡಿವಾಣ ಬಿದ್ದಿದೆ" ಎಂದು ಹೇಳಿದ್ದಾರೆ.