ನವದೆಹಲಿ, ಡಿ.23 (DaijiworldNews/PY): "ಅಯೋಧ್ಯೆ ಭೂ ಹಗರಣದ ಬಗ್ಗೆ ಉತ್ತರಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿರುವುದು ಕಣ್ಣೊರೆಸುವ ತಂತ್ರವಾಗಿದೆ" ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಉತ್ತರ ಪ್ರದೇಶ ಸರ್ಕಾರ ಅಯೋಧ್ಯೆ ಭೂಹಗರದ ಬಗ್ಗೆ ತನಿಖೆಗೆ ಆದೇಶಿಸಿರುವ ಕುರಿತು ಸುಪ್ರೀಂ ಕೋರ್ಟ್ ತಕ್ಷಣವೇ ಮಧ್ಯೆ ಪ್ರವೇಶಿಸಬೇಕು" ಎಂದು ಒತ್ತಾಯಿಸಿದ್ದಾರೆ.
"ಉತ್ತರ ಪ್ರದೇಶ ಸರ್ಕಾರ ವಿರುದ್ದ ಹರಿಹಾಯ್ದಿರುವ ಅವರು, ಬಿಜೆಪಿ ನಾಯಕರು ಲೂಟಿ ಮಾಡುತ್ತಿದ್ದು, ಜನರ ನಂಬಿಕೆಗೆ ಧಕ್ಕೆ ತರುತ್ತಿದ್ದಾರೆ" ಎಂದು ದೂರಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿರುವ ಜಾಗದ ಸಮೀಪದಲ್ಲಿ ಬಿಜೆಪಿ ನಾಯಕರು ಹಾಗೂ ಸರ್ಕಾರಿ ಅಧಿಕಾರಿಗಳ ಸಂಬಂಧಿಕರು ಭೂ ಕಬಳಿಕೆ ಮಾಡಿದ್ದಾರೆ ಎನ್ನುವ ಆರೋಪದ ಬಗ್ಗೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್ ಸೆಹಗಲ್, "ಈ ಕುರಿತು ಕೂಲಂಕುಷವಾಗಿ ತನಿಖೆ ನಡೆಸುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ" ಎಂದಿದ್ಧಾರೆ.