ಹುಬ್ಬಳ್ಳಿ, ಡಿ.29 (DaijiworldNews/PY): "ಅವಿಶ್ರಾಂತವಾಗಿ ಕಾರ್ಯನಿರ್ವಹಿಸುವ ಶಕ್ತಿ ನನ್ನಲಿದೆ. ದಿನದ 15 ಗಂಟೆ ಕೆಲಸ ಮಾಡುವ ಸಂಕಲ್ಪ ಮಾಡಿದ್ದೇನೆ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೊಮ್ಮಾಯಿ ಅವರು 20 ದಿನ ವಿಶ್ರಾಂತಿ ಪಡೆಯಬೇಕು ಎನ್ನುವ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರ ಸಲಹೆಗೆ ಪ್ರತಿಕ್ರಿಯೆ ನೀಡಿದ ಅವರು, "ನಾನು ದಣಿವರಿಯದೇ ಕೆಲಸ ಮಾಡುವ ಶಕ್ತಿ ಹೊಂದಿದ್ದೇನೆ. ವರ್ಷದ 365 ದಿನಗಳೂ ದಣಿವರಿಯದೇ ಕೆಲಸ ಮಾಡುವ ಶಕ್ತಿ ಹಾಗೂ ಸ್ಪೂರ್ತಿ ನನ್ನಲಿದೆ" ಎಂದಿದ್ದಾರೆ.
"2023ರ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನನ್ನ ಗುರಿಯಾಗಿದೆ. ಈ ಸಲುವಾಗಿ ತಯಾರಿ ನಡೆಸುತ್ತೇವೆ. ಬಿಜೆಪಿ ಕಾರ್ಯಕಾರಿಣಿಯಲ್ಲಿ ಪಕ್ಷದ ಸಂಘಟನೆ ಹಾಗೂ ರಾಜಕೀಯ ನಡೆಗಳ ಕುರಿತು ಮುಖ್ಯವಾದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು" ಎಂದು ಹೇಳಿದ್ದಾರೆ.
2020ರ ಚುನಾವಣೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, "ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟಿದ್ದಾರೆ. ಒಂದು ತಂಡವಾಗಿ ಕೆಲಸ ಮಾಡುವ ವಿಚಾರದಲ್ಲಿ ಬಿಜೆಪಿ ನಂಬಿಕೆ ಇಟ್ಟಿದೆ. ಪಕ್ಷದ ಎಲ್ಲಾ ನಾಯಕರು ಸಹ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ" ಎಂದಿದ್ದಾರೆ.