ಬೆಂಗಳೂರು, ಡಿ. 31 (DaijiworldNews/HR): ಗಿರಿ ಜನರು, ಕೊರಗರು, ದಲಿತ ಬಂಧುಗಳು ಭಯ ಪಡುವ ಅವಶ್ಯಕತೆಯಿಲ್ಲ. ಸರ್ಕಾರ ನಿಮ್ಮ ಜೊತೆಯಿದೆ. ಏನಾದರೂ ಇದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕೋಟಾದಲ್ಲಿ ಮೆಹಂದಿ ಕಾರ್ಯಕ್ರಮದಲ್ಲಿ ಪೋಲಿಸರು ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಪಿಎಸ್ಐ ಸಸ್ಪೆಂಡ್ ಆಗಿದ್ದು, ಆರು ಜನರ ವರ್ಗಾವಣೆ ಕೂಡ ಮಾಡಲಾಗಿದೆ. ನಾನು ಸ್ಥಳಕ್ಕೆ ಭೇಟಿ ನೀಡಿದ್ದೆ. ಎಸ್ಪಿ ಮತ್ತು ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿದ್ದೆ. ಈ ಮಧ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿತ್ತು. ಒಬ್ಬ ಕಾನ್ಸ್ಟೇಬಲ್ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಕರಣದ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಅಲ್ಲಿರುವ ಪರಿಸ್ಥಿತಿಯನ್ನು ಗೃಹಸಚಿವರಿಗೆ ವಿವರಿಸಿದ್ದೆ" ಎಂದರು.
ಇನ್ನು ಅಲ್ಲಿರುವವರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಎಸ್ಪಿ ಅವರಿಗೆ ಕರೆ ಮಾಡಿ ಪ್ರಕರಣದ ವಿಚಾರ ಕಾನೂನು ಪ್ರಕಾರ ದೂರು ದಾಖಲಿಸಲು ಸೂಚಿಸಿದ್ದಾರೆ. ದಲಿತರಿಗೆ ಯಾವುದೇ ತೊಂದರೆಯಾಗದಂತೆ ಗೃಹಸಚಿವರು ಸೂಚಿಸಿದ್ದಾರೆ" ಎಂದು ಹೇಳಿದ್ದಾರೆ.