ಜಮ್ಮು, ಜ 01 (DaijiworldNews/MS): ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತದಲ್ಲಿ 12 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಹಲವು ಜನರು ಗಾಯಗೊಂಡಿದ್ದಾರೆ. ತ್ರಿಕೂಟ ಬೆಟ್ಟದ ಗರ್ಭಗುಡಿಯ ಹೊರಭಾಗದಲ್ಲಿ ಈ ಘಟನೆ ನಡೆದಿದೆ.
ಭಕ್ತಾದಿಗಳ ನೂಕುನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದೆ. ಹೊಸ ವರ್ಷದ ಹಿನ್ನಲೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ವೈಷ್ಣೋದೇವಿ ಭವನವನ್ನು ಪ್ರವೇಶಿಸಲು ಮುನ್ನುಗ್ಗಿದಾಗ ನೂಕುನುಗ್ಗಲು ಉಂಟಾಗಿ ದುರಂತ ಸಂಭವಸಿದೆ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಕಾಲ್ತುಳಿತದಲ್ಲಿ 12 ಯಾತ್ರಾರ್ಥಿಗಳು ಸಾವನ್ನಪ್ಪಿದ್ದು ಕನಿಷ್ಠ 14 ಮಂದಿ ಗಾಯಗೊಂಡಿದ್ದಾರೆ ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಥವಾ ಎಡಿಜಿಪಿ ಮುಖೇಶ್ ಸಿಂಗ್ ಹೇಳಿದ್ದಾರೆ.
ಘಟನೆಯ ಕುರಿತು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮಾತಾ ವೈಷ್ಣನೋ ದೇವಿ ಭವನದಲ್ಲಿ ಕಾಲ್ತುಳಿತದಿಂದಾಗಿ ಉಂಟಾದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ದುಃಖಿತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಕೊಳ್ಳಲಿ ಎಂದು ಹೇಳಿದ್ದಾರೆ. ಇನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.