ಬೆಂಗಳೂರು, ಜ 03 (DaijiworldNews/HR): 40 ವರ್ಷಗಳ ಕಾಲ ರಾಜ್ಯವಾಳಿದ ನಿಮ್ಮ ಕಾಂಗ್ರೆಸ್ ಪಕ್ಷ ಯಾಕೆ ಮೇಕೆದಾಟು ಯೋಜನೆ ಜಾರಿಗೊಳಿಸಲಿಲ್ಲ? ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, "ಸಿದ್ದರಾಮಯ್ಯನವರೇ ನೀವು ಮಾತನಾಡುವಾಗ 1968ರಲ್ಲೇ ಕಾಂಗ್ರೆಸ್ ಸರ್ಕಾರ ಮೇಕೆದಾಟು ಯೋಜನೆ ಜಾರಿಗೆ ಪ್ರಯತ್ನ ಮಾಡಿತ್ತು. ಹಾಗಾದರೆ ಆಗ ಕೇಂದ್ರ ಮತ್ತು ರಾಜ್ಯದಲ್ಲಿ ಯಾವ ಸರ್ಕಾರ ಆಡಳಿತ ನಡೆಸುತ್ತಿತ್ತು? ಆ ನಂತರವು 40 ವರ್ಷಗಳ ಕಾಲ ರಾಜ್ಯವಾಳಿದ ನಿಮ್ಮ ಕಾಂಗ್ರೆಸ್ ಪಕ್ಷ ಯಾಕೆ ಮೇಕೆದಾಟು ಯೋಜನೆ ಜಾರಿಗೊಳಿಸಲಿಲ್ಲ?" ಎಂದು ಪ್ರಶ್ನಿಸಿದ್ದಾರೆ.
ಇನ್ನು "ಮೇಕೆದಾಟು ಯೋಜನೆ ಜಾರಿ ವಿಚಾರದಲ್ಲಿ ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಬದ್ಧ ಎಂದು ನಾನು ಹೇಳಿದ್ದೇನೆ. ನಿಮ್ಮದೇ ಪಕ್ಷದ ಸರ್ಕಾರ ಕೇಂದ್ರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಯಾಕೆ ಅನುಷ್ಠಾನ ಮಾಡಲಿಲ್ಲ? ಇದಕ್ಕೆ ನೀವು ಉತ್ತರ ಕೊಡಬೇಕಲ್ಲವೇ?" ಎಂದು ಹೇಳಿದ್ದಾರೆ.
"ಜನರಿಗೆ ತಪ್ಪು ಮಾಹಿತಿ ನೀಡಿ ಅವರ ದಿಕ್ಕು ತಪ್ಪಿಸುವುದೇ ನಿಮ್ಮ ಕಾಯಕವಾಗಿದೆ. ಈಗಾಗಲೇ ಕೇಂದ್ರದಲ್ಲಿನ ನಮ್ಮ ಬಿಜೆಪಿ ಸರ್ಕಾರ ಮೇಕೆದಾಟು ಯೋಜನೆಗೆ ತಾತ್ವಿಕ ಅನುಮೋದನೆ ಕೊಟ್ಟಿರುವುದನ್ನು ಯಾಕೆ ಜನರ ಎದುರು ಹೇಳದೇ ಮರೆಮಾಚಿದಿರಿ? ಇದೇ ಅಲ್ಲವೇ ನಿಮ್ಮ ಸುಳ್ಳಿನ ರಾಜಕೀಯದ ಮೇಲಾಟ?" ಎಂದಿದ್ದಾರೆ.
ಸುಳ್ಳು ನಮ್ಮಲ್ಲಿಲ್ಲವಯ್ಯ, ಸುಳ್ಳೇ ನಮ್ಮನೆ ದೇವರು ಎನ್ನುವ ರಾಜಕೀಯ ಕುಟಿಲ ನೀತಿ ನಿಮ್ಮದು, ನಿಮ್ಮ ಪಕ್ಷದ್ದು ಎಂಬುದು ಸತ್ಯವಿದಿತ ಎಂದು ಲೇವಡಿ ಮಾಡಿದ್ದಾರೆ. ನೀವು ಅಧಿಕಾರಕ್ಕೆ ಬರುವ ದೃಷ್ಟಿ ಯಿಂದ ಜನರಿಗೆ ಸುಳ್ಳುಗಳ ಸರಮಾಲೆ ಪೋಣಿಸುತ್ತಾ ಅವರನ್ನು ದಿಕ್ಕು ತಪ್ಪಿಸಲು ಪಾದಯಾತ್ರೆ ಮಾಡಲು ಹೊರಟಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.