ತಮಿಳುನಾಡು, ಜ 04 (DaijiworldaNews/AN): ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಶೂಟಿಂಗ್ ರೇಂಜ್ ನಲ್ಲಿ ಸಿಬ್ಬಂದಿಗಳು ತರಬೇತಿಯಲ್ಲಿದ್ದಂತಹ ಸಂದರ್ಭದಲ್ಲಿ ಆಕಸ್ಮಿಕವಾಗಿ ಸಿಡಿದ ಗುಂಡು ತಗುಲಿ ಗಂಭೀರ ಗಾಯಗೊಂಡಿದ್ದ 11 ವರ್ಷದ ಬಾಲಕ ಕೆ. ಪುಘಝೇಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಕಳೆದ ವರ್ಷ ಡಿಸೆಂಬರ್ 30ರಂದು ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಬಾಲಕನ್ನು ತಂಜಾವೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ವೈದ್ಯರು ಅದೇ ದಿನ ಬಾಲಕನಿಗೆ ತಗುಲಿದ್ದ ಬುಲೆಟ್ ನ್ನು ಹೊರತೆಗೆದು ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸೋಮವಾರ ಮೃತಪಟ್ಟಿದ್ದಾನೆ.
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು, ಸಿಎಂ ಪರಿಹಾರ ನಿಧಿಯಿಂದ ಬಾಲಕನ ಕುಟುಂಬಕ್ಕೆ 10 ಲಕ್ಷ ರೂ.ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಘಟನೆಯ ಕುರಿತು ಆಕ್ರೋಶಗೊಂಡಿರುವ ಸ್ಥಳೀಯರು ಶೂಟಿಂಗ್ ರೇಂಜ್ನ್ನು ಮುಚ್ಚಬೇಕು ಮತ್ತು ಅಪಘಾತದ ಬಗ್ಗೆ ಜಿಲ್ಲಾ ಪೊಲೀಸ್ ತನಿಖೆಗೆ ಆದೇಶಿಸಬೇಕು ಒತ್ತಾಯಿಸಿದ್ದಾರೆ. ಈ ಬಗ್ಗೆ ಕೀರನೂರು ಪೊಲೀಸರು ಸಿಐಎಸ್ಎಫ್ ಸಿಬ್ಬಂದಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 286 ಮತ್ತು 338 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.