ಬೆಂಗಳೂರು, ಜ 04 (DaijiworldaNews/HR): ಬಿಜೆಪಿ ಸರ್ಕಾರದ ಅಭಿವೃದ್ಧಿಪರ ರಾಜಕಾರಣದ ಮುಂದೆ ಕನಕಪುರದ ರೌಡಿ ಸಹೋದರರ ಧಮ್ಕಿ ರಾಜಕಾರಣ ನಡೆಯುವುದಿಲ್ಲ. ಗೂಂಡಾ ವರ್ತನೆ ತೋರಿ ಪ್ರಜಾಪ್ರಭುತ್ವದಲ್ಲಿ ಬಹಳ ಕಾಲ ಉಳಿಯಲು ಸಾಧ್ಯವಿಲ್ಲ.ಕಾಂಗ್ರೆಸ್ ಪಕ್ಷವೀಗ ಗೂಂಡಾಗಳನ್ನು ತಯಾರು ಮಾಡುವ ಫ್ಯಾಕ್ಟರಿಯಾಗಿದೆ ಎಂದು ಬಿಜೆಪಿ ಕಿಡಿಕಾರಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, "ಕೆಂಪೇಗೌಡರು ಆಳಿದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ತೋರಿದ ಗೂಂಡಾ ವರ್ತನೆ ಖಂಡನೀಯ. ರಾಜ್ಯದ ಮರ್ಯಾದೆಯನ್ನು ಮಣ್ಣುಪಾಲು ಮಾಡುವ ನಾಯಕರನ್ನು ಕಾಂಗ್ರೆಸ್ ಬೆಳೆಸುತ್ತಿದೆ. ಇಂತಹ ಅನೈತಿಕ ರಾಜಕಾರಣದ ಮೂಲಕ ಕಾಂಗ್ರೆಸ್ ರಾಜ್ಯದ ಜನತೆಗೆ ಯಾವ ಸಂದೇಶ ನೀಡುತ್ತಿದ್ದಾರೆ" ಎಂದು ಪ್ರಶ್ನಿಸಿದೆ.
ಇನ್ನು "ಸರ್ಕಾರಿ ಕಾರ್ಯಕ್ರಮದಲ್ಲಿ ಗೂಂಡಾಗಿರಿ ಪ್ರದರ್ಶಿಸಿದ ಕಾಂಗ್ರೆಸ್ ಪಕ್ಷದ ನಾಯಕರನ್ನು ರಾಜ್ಯದ ಜನತೆ ಎಂದಿಗೂ ಕ್ಷಮಿಸುವುದಿಲ್ಲ. ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಕೇವಲ ಶಿಷ್ಟಾಚಾರ ಉಲ್ಲಂಘಿಸಿದ್ದಲ್ಲ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಹಾಗೂ ನಾಡಪ್ರಭು ಕೆಂಪೇಗೌಡರಿಗೆ ಅವಮಾನ ಮಾಡಿದ್ದಾರೆ" ಎಂದು ವಾಗ್ದಾಳಿ ನಡೆಸಿದೆ.