ಬೆಂಗಳೂರು, ಜ 06 (DaijiworldNews/AN): ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಜನವರಿ 7ರಿಂದ 9ರ ವರೆಗೆ ಮೂರು ದಿನಗಳ ಕಾಲ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಬಿಜೆಪಿ ಬೈಠಕ್ ಸಭೆಯನ್ನು ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಎಲ್ ಸಿ ಎನ್ ರವಿಕುಮಾರ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, "ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯ ಸರ್ಕಾರ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸದಂತೆ ನಿಯಮಗಳನ್ನು ಜಾರಿಗೊಳಿಸಿರುವುದರಿಂದ ಬೈಠಕ್ ಸಭೆಯನ್ನು ಮುಂದೂಡಲಾಗಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಪರಿಸ್ಥಿತಿಯನ್ನು ಗಮನಿಸಿ ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು" ಎಂದರು.
ಇನ್ನು ಈ ಬಗ್ಗೆ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದು, ಸರಕಾರ ಹಾಗೂ ಆಡಳಿತ ಪಕ್ಷವಾಗಿ ಬಿಜೆಪಿ ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಅದಕ್ಕಾಗಿ ಪಕ್ಷದ ಕಾರ್ಯಕ್ರಮಗಳನ್ನು ಮುಂದೂಡುವಂತೆ ಸೂಚನೆ ನೀಡಿದ್ದರು.