ಬೆಂಗಳೂರು, ಜ 07 (DaijiworldNews/PY): "ಮೇಕೆದಾಟು ಪಾದಯಾತ್ರೆ ಮೂಲಕ ಈ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುತ್ತದೆ ಎಂದು ಕಾಂಗ್ರೆಸ್ಸಿಗರು ನನಗೆ ಗ್ಯಾರಂಟಿ ನೀಡಿದ್ದಲ್ಲಿ ಎಲ್ಲರಿಗಿಂತ ಮುಂದೆ ನಾನೇ ಪಾದಯಾತ್ರೆಯಲ್ಲಿ ಭಾಗವಹಿಸುತ್ತೇನೆ" ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಪಕ್ಷದ ಕಚೇರಿ ಜೆಪಿ ಭಾವನದಲ್ಲಿ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಕಾಂಗ್ರೆಸ್ ಪಕ್ಷದ್ದು ಪಾದಯಾತ್ರೆ ಅಲ್ಲ, ಮತಯಾತ್ರೆ. ಕೇವಲ ಮುಂದಿನ ಚುನಾವಣೆಯಲ್ಲಿ ಮತ ಪಡೆಯುವ ಉದ್ದೇದಿಂದ ಕಾಂಗ್ರೆಸ್ ಜನರಿಗೆ ಪಾದಯಾತ್ರೆ ಹೆಸರಿನಲ್ಲಿ ಮಂಕುಬೂದಿ ಎರಚುತ್ತಿದೆ" ಎಂದಿದ್ಧಾರೆ.
"ಕೈಪಕ್ಷದ ಪ್ರತಿಪಕ್ಷದ ನಾಯಕರು ಮೇಕೆದಾಟು ಯೋಜನೆಯ ಕುರಿತು ದಿನಕ್ಕೆ ಒಂದೊಂದು ಹಸಿಸುಳ್ಳು ಹೇಳುತ್ತಿದ್ದಾರೆ. ಇನ್ನು ಪಕ್ಷದ ರಾಜ್ಯಾಧ್ಯಕ್ಷರು ಪ್ರಾಣ ಹೋದರೂ ಪಾದಯಾತ್ರೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎನ್ನುತ್ತಿದ್ದಾರೆ. ಪಾಪ, ನಿಮ್ಮ ಪ್ರಾಣ ಏಕೆ ವ್ಯರ್ಥ ಮಾಡಿಕೊಳ್ಳುತ್ತೀರಾ?" ಎಂದು ವ್ಯಂಗ್ಯವಾಡಿದ್ದಾರೆ.
"ಕರ್ನಾಟಕದಲ್ಲಿ ಕಾಂಗ್ರೆಸ್ ಮೇಕೆದಾಟು ವಿಚಾರವಾಗಿ ಪಾದಯಾತ್ರೆ ಮಾಡುತ್ತಿದೆ. ಆದರೆ, ಪಕ್ಕದ ತಮಿಳುನಾಡಿನಲ್ಲಿ ಮೇಕೆದಾಟು ಯೋಜನೆಯನ್ನು ವಿರೋಧ ಮಾಡುತ್ತಿರುವ ಡಿಎಂಕೆ ಪಕ್ಷದ ಮಿತ್ರಪಕ್ಷವಾಗಿದೆ" ಎಂದಿದ್ದಾರೆ.